ನಾಪೋಕ್ಲು, ಜ. ೯: ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕೆಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಹೇಳಿದರು.

ನಾಪೋಕ್ಲು ಬಸ್ ನಿಲ್ದಾಣದಲ್ಲಿ ಕೊಡಗು ಜಿಲ್ಲಾ ಪೊಲೀಸ್, ನಾಪೋಕ್ಲು ಠಾಣೆ ಹಾಗೂ ವಿವಿಧ ಶಾಲೆಗಳ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿದ್ದ ಜನಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮುಖ್ಯವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ಕಾರುಗಳಲ್ಲಿ ಸಂಚರಿಸುವವರು ಸೀಟ್‌ಬೆಲ್ಟ್ ಧರಿಸಬೇಕು. ಚಾಲನಾ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದರು. ಮಾರುಕಟ್ಟೆ ಸಮೀಪದಿಂದ ಪೇಟೆಯ ಮುಖ್ಯ ಬೀದಿಯಲ್ಲಿ ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ವಿವಿಧ ಘೋಷವಾಕ್ಯದೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಇದ್ದರು.