ಪೊನ್ನಂಪೇಟೆ, ಜ. ೯: ಶಿಕ್ಷಕರು ಮಕ್ಕಳಿಗೆ ಕೇವಲ ಪಠ್ಯ ಬೋಧನೆ ಮಾಡದೇ, ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪಠ್ಯೇತರ ಚಟುವಟಿಕೆಗೂ ಹೆಚ್ಚು ಒತ್ತು ನೀಡಬೇಕು ಎಂದು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲೀರ ಎಂ. ರಶೀದ್ ಹೇಳಿದರು.

ಪೊನ್ನಂಪೇಟೆಯ ಹಳ್ಳಿಗಟ್ಟು ರಸ್ತೆಯಲ್ಲಿರುವ ನಿನಾದ ಶಾಲೆಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಯೂ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಮಕ್ಕಳು ಒಂದೇ ವಿಷಯಕ್ಕೆ ಸೀಮಿತವಾಗಿ ಉಳಿದ ಚಟುವಟಿಕೆಗಳಲ್ಲಿ ಭಾಗವಹಿಸಲು ಹಿಂದೇಟು ಹಾಕಿದರೆ ಆರಂಭಿಕ ಶಿಕ್ಷಣ ಪರಿಪೂರ್ಣವಾಗುವುದಿಲ್ಲ ಎಂದರು.

ಮತ್ತೋರ್ವ ಮುಖ್ಯ ಅತಿಥಿ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ದೈಹಿಕ ನಿರ್ದೇಶಕ ಡಾ. ಕೆ.ಎ. ಈಶ್ವರ್ ಮಾತನಾಡಿ, ಕ್ರೀಡೆಗಳು ದೈಹಿಕ ಸದೃಢತೆಯನ್ನು ಮೀರಿ ವಿದ್ಯಾರ್ಥಿಗಳಿಗೆ ಹಲವಾರು ಪ್ರಯೋಜನಗಳನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಸಮಾರAಭದಲ್ಲಿ ಪಾಲ್ಗೊಂಡಿದ್ದ ಗೋಣಿಕೊಪ್ಪಲಿನ ನೇತ್ರ ತಜ್ಞ ಡಾ. ಸೌಮ್ಯ ಗಣೇಶ್ ನಾಣಯ್ಯ ಮಾತನಾಡಿ, ವಿದ್ಯಾರ್ಥಿಗಳು ಓದಿನೊಂದಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಇದಕ್ಕೆ ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ, ಯೋಗ ಮತ್ತು ನಿರ್ದಿಷ್ಟಾವಧಿಯ ನಿದ್ದೆ ಮುಖ್ಯವಾಗಿದೆ ಎಂದರಲ್ಲದೆ, ಅತಿಯಾದ ಮೊಬೈಲ್ ಬಳಕೆ ಕಣ್ಣಿಗೆ ಹೆಚ್ಚು ಹಾನಿಕಾರಕ ಎಂದು ಎಚ್ಚರಿಸಿದರು.

ವೇದಿಕೆಯಲ್ಲಿ ಶಾಲೆಯ ಆಡಳಿತ ನಿರ್ವಾಹಕ ಕೆ.ಸಿ. ನಾಗೇಶ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಲೀರ ಎಂ. ರಶೀದ್, ಡಾ. ಕೆ.ಎ. ಈಶ್ವರ್ ಮತ್ತು ಡಾ. ಸೌಮ್ಯ ಗಣೇಶ್ ನಾಣಯ್ಯ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.