ಮಡಿಕೇರಿ, ಜ. ೧೧: ಜಿಲ್ಲಾ ಕಾಂಗ್ರೆಸ್ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡ ಸಮುದಾಯದವರಿಗೆ ಸೂಕ್ತ ಸ್ಥಾನಮಾನ ದೊರೆಯುತ್ತಿಲ್ಲ ಎಂಬ ಆರೋಪ ವ್ಯಕ್ತವಾಗಿದ್ದ ಹಿನ್ನೆಲೆ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ. ಮಂತರ್ ಗೌಡ ಸಮ್ಮುಖದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಸಭೆ ನಡೆಯಿತು.
ಕೆಲವು ದಿನಗಳ ಹಿಂದೆ ಕೆಪಿಸಿಸಿ ಸದಸ್ಯ ಹೆಚ್.ಎಂ. ನಂದಕುಮಾರ್ ಅವರ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಸಭೆ ನಡೆದು, ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದಲಿತರಿಗೆ ಲಭ್ಯವಾಗುತ್ತಿಲ್ಲ. ಬೇಡಿಕೆಗಳು ಈಡೇರುತ್ತಿಲ್ಲ ಎಂದು ಚರ್ಚೆಗಳಾಗಿ ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಈ ಬೆಳವಣಿಗೆಯ ನಂತರ ಇಂದು ಶಾಸಕದ್ವಯರ ಸಮ್ಮುಖದಲ್ಲಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಕೆಪಿಸಿಸಿ ಸದಸ್ಯ ಹೆಚ್.ಎಂ. ನಂದಕುಮಾರ್, ದಲಿತರಿಗೆ ಪಕ್ಷದ ಸಮಿತಿಗಳಾಗಲಿ, ಸರಕಾರದ ಸಮಿತಿ, ನಿಗಮಗಳಲ್ಲಿ ಅಧ್ಯಕ್ಷ ಸ್ಥಾನ ಸಿಗುತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ದಲಿತ ವರ್ಗ ದೊಡ್ಡ ಮಟ್ಟದಲ್ಲಿ ಶ್ರಮಿಸಿದೆ. ಈ ಹಿನ್ನೆಲೆ ಹಿಂದುಳಿದಿರುವ ದಲಿತ ವರ್ಗಕ್ಕೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಗಮನ ಸೆಳೆದರು.
ಶಾಸಕದ್ವಯರು ಮಾತನಾಡಿ, ಪಕ್ಷ ಎಂದಿಗೂ ದಲಿತರನ್ನು ಕಡೆಗಣಿಸುವುದಿಲ್ಲ. ಎಲ್ಲರ ಸಹಕಾರ ಬೇಕು. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ನಿಮ್ಮ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆಯ ನುಡಿಗಳನ್ನಾಡಿದರು. ಈ ವೇಳೆ ಸಮುದಾಯದ ಪ್ರಮುಖರು ತಮ್ಮ ಬೇಡಿಕೆಗಳನ್ನು ಮುಂದಿಟ್ಟರು. ಪ್ರಮುಖವಾಗಿ ನಿವೇಶನ ರಹಿತರಿಗೆ ನಿವೇಶನ ಒದಗಿಸಬೇಕೆಂಬ ಹಕ್ಕೊತ್ತಾಯ ಮಂಡಿಸಿದರು. ವೇದಿಕೆಯಲ್ಲಿ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಚಂದ್ರಮೌಳಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪಿ.ಆರ್. ಪಂಕಜ, ಎಸ್ಸಿ ಘಟಕ ಅಧ್ಯಕ್ಷ ಜಯೇಂದ್ರ, ಯುವ ಘಟಕ ಅಧ್ಯಕ್ಷ ಜಮ್ಮಡ ಸೋಮಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.