ನಾಪೋಕ್ಲು, ಫೆ. ೪: ಸಮೀಪದ ಹೊದವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ನಡೆಯಿತು.

ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ. ಹಂಸ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಬಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ಮಾತನಾಡಿ, ಮಕ್ಕಳು ಶಿಕ್ಷಣವನ್ನು ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು. ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿ ಮಕ್ಕಳು ಯಾವುದೇ ದೌರ್ಜನ್ಯಕ್ಕೆ ಒಳಗಾದರೆ ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು.

ಜಿಲ್ಲಾ ಮಹಿಳಾ ಮಿಷನ್ ಶಕ್ತಿ ಸಂಯೋಜಕಿ ಮಮತಾ ಮಾತನಾಡಿ, ಹೆಣ್ಣುಮಕ್ಕಳಿಗೆ ೧೮ ವರ್ಷ ತುಂಬಿದ ಬಳಿಕ, ಗಂಡು ಮಕ್ಕಳಿಗೆ ೨೧ ವರ್ಷ ತುಂಬಿದ ಬಳಿಕ ವಿವಾಹ ನೆರವೇರಿಸಬೇಕು ಎಂದರು. ಈ ಯೋಜನೆಯನ್ನು ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಸುಮಾವತಿ, ಸದಸ್ಯ ಹಮೀದ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವತ್ಸಲ, ಮೂರ್ನಾಡು ಕ್ಲಸ್ಟರ್ ಕೇಂದ್ರದ ಸಿಆರ್‌ಪಿ ಉಷಾ, ಹೊದವಾಡ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಶೋಕ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಂ.ಟಿ. ರಾಧಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ಸುಮಾ, ತುಳಸಿ, ಶೃತಿ, ಶೋಭಾ, ಅಂಬ್ರಿನ ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.