ಕೂಡಿಗೆ, ಫೆ. ೫: ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ - ಬಸವಗಾಡಿ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರೂ. ೨೦ ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿದರು.

ನಂತರ ಮಾತನಾಡಿದ ಅವರು, ಈ ಸಾಲಿನಲ್ಲಿ ಮಡಿಕೇರಿ ಕ್ಷೇತ್ರ ವ್ಯಾಪ್ತಿಯ ಅನೇಕ ಉಪ ಗ್ರಾಮಗಳಿಗೆ ಉಪ ಸಂಪರ್ಕ ರಸ್ತೆಯನ್ನು ನಿರ್ಮಾಣಗೊಳಿಸಲಾಗಿದ್ದು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಗಿರಿಜನ ಉಪಯುಕ್ತ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಅನುದಾನವನ್ನು ಕಾಯ್ದಿರಿಸಿ, ನೂತನ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದರು.

ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಅನಂತ, ಅರುಣ್ ರಾವ್, ಚಂದ್ರು, ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ರಮೇಶ್, ತೊರೆನೂರು ಸಹಕಾರ ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಕೆ.ಎಸ್. ಕೃಷ್ಣೇಗೌಡ, ರೈತ ಸಂಘದ ಸದಸ್ಯರು, ಸೇರಿದಂತೆ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.