ಮಡಿಕೇರಿ, ಫೆ.೯: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ೨೩ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಸಣ್ಣ ಕಥೆಗಳ ಗೌರಮ್ಮ ದತ್ತಿನಿಧಿ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಮಡಿಕೇರಿಯ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ತಾ.೧೧ ರಂದು(ನಾಳೆ) ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ವಹಿಸಿಕೊಳ್ಳಲಿದ್ದು ಜಿಲ್ಲೆಯ ಹಿರಿಯ ಸಾಹಿತಿ ಸುಬ್ರಾಯ ಸಂಪಾಜೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಾಹಿತಿ ಕೃಪಾ ದೇವರಾಜ್ ಅವರ ಮಂತ್ರ ಪುಷ್ಪ ಕಥಾ ಸಂಕಲನಕ್ಕೆ ಗೌರಮ್ಮ ದತ್ತಿ ಪ್ರಶಸ್ತಿ ಲಭಿಸಿದ್ದು ಗೋಣಿಕೊಪ್ಪಲಿನ ಕಾವೇರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಎಸ್.ಎಂ ರಜಿನಿ ರವರು ಪ್ರಶಸ್ತಿ ಪ್ರದಾನ ಮಾಡಿ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ ರಮೇಶ್, ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿ ಅಧ್ಯಕ್ಷರಾದ ರವಿಕುಮಾರ್ ಜಿ.ವಿ ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಕಾರ್ಯದರ್ಶಿ ಎಸ್.ಜಿ ಉಮೇಶ್ ಉಪಸ್ಥಿತರಿರುತ್ತಾರೆ.