ಕೂಡಿಗೆ, ಫೆ. ೧೦: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿರುವ ಶ್ರೀ ಅಳುವಾದಮ್ಮ ದೇವಾಲಯದ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಸಮ್ಮುಖದಲ್ಲಿ ಗ್ರಾಮ ಅರಣ್ಯ ಸಮಿತಿ ಸಭೆ ನಡೆಯಿತು.

ಮೊದಲಿಗೆ ಸಭೆಯಲ್ಲಿ ಶಾಸಕ ಡಾ. ಮಂತರ್ ಗೌಡ ಚಿಕ್ಕಅಳುವಾರ ಗ್ರಾಮದಲ್ಲಿ ಸರ್ವೆ ನಂಬರ್ ೧/೧ ರಲ್ಲಿ ೭೫ ರೈತ ಕುಟುಂಬದವರು ಬೇಸಾಯ ಮಾಡಿಕೊಂಡು ತಮ್ಮ ಜೀವನವನ್ನು ಸಾಗಿಸುತ್ತಿರುವ ಸಮಗ್ರವಾದ ಮಾಹಿತಿಯನ್ನು ಪಡೆದುಕೊಂಡರು. ಈ ಕುಟುಂಬಗಳಿಗೆ ಮುಂದಿನ ದಿನಗಳಲ್ಲಿ ಇಲಾಖೆಯ ಮಾನದಂಡಗಳನ್ನು ಸ್ವಲ್ಪ ಮಟ್ಟಿಗೆ ಸಡಿಲಿಸುವ ಮೂಲಕ ಹಕ್ಕು ಪತ್ರಗಳನ್ನು ನೀಡಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಸೋಮಶೇಖರ್ ಮಾತನಾಡಿ, ಶಾಸಕರ ಸೂಚನೆಯಂತೆ ಅಧಿಕಾರಿಗಳ ಸಭೆ ನಡೆಸಿ ರೈತರಿಗೆ ಅನುಕೂಲ ಕಲ್ಪಿಸಲು ಮುಂದಾಗುತ್ತೇವೆ ಎಂದು ತಿಳಿಸಿದರು.

ಸಭೆಯಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ ಶಶಿಧರ್ ಮಾತನಾಡಿ, ರೈತರು ಕಳೆದ ಅನೇಕ ವರ್ಷಗಳಿಂದಲೂ ಅನುಭವಿಸುತ್ತಿರುವ ಹಕ್ಕು ಪತ್ರದ ಸಮಸ್ಯೆ ಬಗ್ಗೆ ಮಾಹಿತಿಯನ್ನು ಸಭೆಗೆ ಒದಗಿಸಿದರು.

ಈ ಸಂದರ್ಭ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಹೊನ್ನೇಗೌಡ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸಿದ್ದೇಗೌಡ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಕುಮಾರ್, ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾರ್, ತೊರೆನೂರು ಗ್ರಾ.ಪಂ. ಅಧ್ಯಕ್ಷೆ ಶೋಭಾ ಪ್ರಕಾಶ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ನಂಜುAಡಪ್ಪ, ಅಭಿವೃದ್ಧಿ ಅಧಿಕಾರಿ ಶ್ಯಾಮ್ ಸೇರಿದಂತೆ ಪ್ರಮುಖರಾದ ಕೆ.ಎಸ್. ಕೃಷ್ಣ ಗೌಡ, ಟಿ.ಕೆ.ಪಾಂಡುರAಗ, ಪ್ರೇಮ ಕುಮಾರ್, ರಮೇಶ್, ಮೂರ್ತಿ, ಮತ್ತಿತರರು ಹಾಜರಿದ್ದರು.