ಸಿದ್ದಾಪುರ, ಫೆ. ೧೨: ರೂ. ೫೦ ಲಕ್ಷ ವೆಚ್ಚದಲ್ಲಿ ಸಿದ್ದಾಪುರದ ಕರಡಿಗೋಡು ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೂ. ೬ ಕೋಟಿ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಅನುದಾನದಲ್ಲಿ ವೀರಾಜಪೇಟೆ ಕ್ಷೇತ್ರದ ಸಿದ್ದಾಪುರದ ಕರಡಿಗೋಡು ರಸ್ತೆಗೆ ರೂ. ೫೦ ಲಕ್ಷ ಹಾಗೂ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಕೊಳವೆ ಬಾವಿ ಕಾಮಗಾರಿಗಳಿಗೆ ರೂ. ೫೦ ಲಕ್ಷ ವೆಚ್ಚ ವ್ಯಯಿಸಲಾಗುವುದೆಂದರು.

ಈಗಾಗಲೇ ವೀರಾಜಪೇಟೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿ ಇವೆ. ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಮುಕ್ತಾಯಗೊಂಡಿದೆ ಎಂದು ಮಾಹಿತಿ ನೀಡಿದರು. ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರೂ. ೭೫ ಕೋಟಿ ವೆಚ್ಚದಲ್ಲಿ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಹಾಗೂ ರೂ ೧೫೦ ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಅಭಿವೃದ್ಧಿಗೆ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದರು. ಕಳಪೆ ಕಾಮಗಾರಿ ಹಾಗೂ ನಿರ್ಲಕ್ಷö್ಯತನ ವಹಿಸುವ ಗುತ್ತಿಗೆದಾರರಿಗೆ ಯಾವುದೇ ಕಾರಣಕ್ಕೂ ಕಾಮಗಾರಿಯ ಹಣವನ್ನು ನೀಡುವುದಿಲ್ಲ ಹಾಗೂ ಇನ್ನು ಮುಂದಕ್ಕೆ ಕಾಮಗಾರಿಗಳನ್ನು ನೀಡುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿದರು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮ ಗೋಪಾಲ್, ಗ್ರಾಮ ಪಂಚಾಯಿತಿ ಸದಸ್ಯರುಗಳು, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕಾಂಗ್ರೆಸ್ ಅಲ್ಪಸಂಖ್ಯಾತ ಜಿಲ್ಲಾ ಘಟಕದ ಅಧ್ಯಕ್ಷ ಹನೀಫ್, ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಅನಿಲ್ ಶೀನಪ್ಪ, ಚೇಕು, ಜಾಫರ್ ಆಲಿ, ಇನ್ನಿತರರು ಹಾಜರಿದ್ದರು.