ಮಡಿಕೇರಿ, ಫೆ. ೧೨: ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಮುಖ್ಯ ಪೇದೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿದ್ದ ಮಡಿಕೇರಿಯ ಮಂಗಳಾದೇವಿ ನಗರ ನಿವಾಸಿ ಬಿ.ಎಸ್. ಸಂದೀಪ್ ರೈ (೪೨) ಮೃತಪಟ್ಟ ವ್ಯಕ್ತಿ. ಅನಾರೋಗ್ಯದಿಂದ ಬಳಲುತ್ತಿದ್ದ ಸಂದೀಪ್ ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಂದೀಪ್ ತಾ. ೧೧ ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ಮಡಿಕೇರಿಯಲ್ಲಿ ನೆರವೇರಿತು.