ಹಾವೇರಿ, ಫೆ. ೧೪: ಕಂದಾಯ ಇಲಾಖೆಯಿಂದ ಎರಡನೇ ಬಾರಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ ೨.೨೦ ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ ಎಂದರು.
ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಸರ್ಕಾರ ಬಂದು ೨ ವರ್ಷ ೯ ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ ೨೪೩ ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. ೨೦೨೩-೧೮ ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ ೩೦ ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ ಎಂದರು. “ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ” ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ ಅಧಿಕಾರಿಗಳನ್ನೂ ಗುರುತಿಸಿ ಸನ್ಮಾನಿಸಲಾಯಿತು.
ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಭೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ ೨೦ ಕ್ಕೂ ಹೆಚ್ಚು ಮಂದಿ ಶಾಸಕರುಗಳು ಮತ್ತು ಮುಖಂಡರುಗಳು, ನಾಯಕರು ಉಪಸ್ಥಿತರಿದ್ದರು.