ಸಿದ್ದಾಪುರ, ಮಾ. ೩: ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.
ಚೆನ್ನಯ್ಯನಕೋಟೆ ಗ್ರಾಮದಲ್ಲಿ ರೂ. ೨ ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆ ಮೂಲಕ ನಡೆಯುವ ನಾಲೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿಯನ್ನು ಗುಣಮಟ್ಟ ಕಾಯ್ದುಕೊಂಡು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ಈ ಕಾಮಗಾರಿಯಿಂದಾಗಿ ಈ ಭಾಗದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಗ್ರಾಮೀಣ ಭಾಗದ ಬಹುತೇಕ ರಸ್ತೆಗಳ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿದ್ದು ಬಹುತೇಕ ಕಾಮಗಾರಿಗಳು ಮುಕ್ತಾಯಗೊಂಡಿವೆೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಮುಂದುವರೆಯುತ್ತಿವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಭಾಗದಲ್ಲಿ ಶಾಸಕರ ಅನುದಾನದಿಂದ ರೂ. ೧೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷಿö್ಮ, ಸದಸ್ಯರಾದ ವಿಜು ನಾರಾಯಣ, ಶೀಲಾ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಅನಿಲ್ ಶೀನಪ್ಪ, ಚೇಕು, ಸಾಬು ಕಾಳಪ್ಪ, ಹಾಗೂ ಇನ್ನಿತರರು ಹಾಜರಿದ್ದರು.