ಕೂಡಿಗೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಕುರಿತು ಮಾಹಿತಿ ಕಾರ್ಯಾಗಾರ ತೊರೆನೂರು ಸರ್ಕಾರಿ ಪ್ರೌಢ ಶಾಲೆ ಸಭಾಂಗಣದಲ್ಲಿ ನೆರವೇರಿತು.
ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯ ಮೇಲ್ವಿಚಾರಕಿ ಸಾವಿತ್ರವ್ವ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು. ಮಕ್ಕಳ ರಕ್ಷಣೆಗಾಗಿ ಅನೇಕ ಹಕ್ಕುಗಳಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಪೋಷಕರ ಹಾಗೂ ಶಿಕ್ಷಕರ ಪಾತ್ರವು ಬಹಳ ಮುಖ್ಯವಾಗಿದೆ.
ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸತ್ಯನಾರಾಯಣ ಮಾತನಾಡಿ, ಪ್ರತಿಯೊಬ್ಬ ಮಕ್ಕಳು ಸರ್ಕಾರದಿಂದ ಸಿಗುವ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಹೆಣ್ಣು ಮತ್ತು ಗಂಡು ನಡುವೆ ಸಮಾನತೆ ಇರಬೇಕು. ಯಾವುದೇ ಬೇದ ಭಾವ ಮಾಡದೇ ಒಂದೇ ಎಂಬ ಭಾವನೆಯನ್ನು ಅಳವಡಿಸಿಕೊಳ್ಳಬೇಕು ಎಂದರು.
ಕೊಡಗು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಮಿಷನ್ ಸಂಯೋಜಕಿ ಮಮತಾ ಮಾತನಾಡಿ, ಲಿಂಗಾನುಪಾತದ ಅಂತರವನ್ನು ಕಡಿಮೆ ಮಾಡುವುದು, ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆಯನ್ನು ತೆಗೆದುಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಜಾರಿ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.