ಸಿದ್ದಾಪುರ, ಮಾ. ೧೭: ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷ ಮಿತಿಮೀರಿದ ಹಿನ್ನೆಲೆಯಲ್ಲಿ ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ವನ್ಯಪ್ರಾಣಿಗಳ ಉಪಟಳ ಹೆಚ್ಚಾಗಿರುವ ಸ್ಥಳಗಳಲ್ಲಿ ಚಲನವಲನ ಪತ್ತೆಗೆ ಆಧುನಿಕ ತಂತ್ರಜ್ಞಾನದ ಎ.ಐ. ಕ್ಯಾಮರಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಕಾಡಾನೆಗಳು ಹೆಚ್ಚಾಗಿ ಬರುವ ಸ್ಥಳಗಳಲ್ಲಿ ಹೆಚ್ಚಿನ ಶಬ್ದ ಬರುವಂತಹ ಧ್ವನಿವರ್ಧಕ ಅಳವಡಿಸಿ ಆನೆಗಳು ಈ ಶಬ್ದದಿಂದ ಮರಳಿ ಹಿಂದಿರುಗುವ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಬೇಕೆಂದು ನಿರ್ದೇಶಿಸಿದರು. ಮುಂದಿನ ದಿನಗಳಲ್ಲಿ ಆನೆ ಮಾನವ ಸಂಘರ್ಷವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾಮಗಾರಿಗಳಿಗೆ ಸರಕಾರದಿಂದ ಅನುದಾನವನ್ನು ಜಿಲ್ಲೆಗೆ ನೀಡುವುದಾಗಿ ತಿಳಿಸಿದರು. ಮಡಿಕೇರಿಯ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ, ವನ್ಯಜೀವಿ ವಿಭಾಗದ ಡಿಎಫ್‌ಓ ನೆಹರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.