ವೀರಾಜಪೇಟೆ, ಮಾ. ೨೫: ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ. ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡ ತನವನ್ನು ಬೆಳೆಸುವ ಕಾರ್ಯ ಮಾಡುತ್ತದೆ ಎಂದು ಸ.ಪ್ರ.ದ ಕಾಲೇಜಿನ ಪ್ರಾಂಶುಪಾಲೆ ಪ್ರೊ ಡಿ.ಕೆ. ಸರಸ್ವತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ವೀರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ದಿ. ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಹಾಗೂ ಮಂಡೇಪAಡ ಅಕ್ಕಮ್ಮ ಗಣಪತಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಯು ಇಂದು ಜಾತಿ, ಧರ್ಮ ಹಾಗೂ ಗಡಿಯನ್ನು ಮೀರಿ ಬೆಳೆದಿದೆ. ಇದಕ್ಕೆ ಒಂದು ಮುಖ್ಯ ಕಾರಣವೆಂದರೆ ಕನ್ನಡ ಸಾಹಿತ್ಯ ಪರಿಷತ್ತು. ತನ್ಮೂಲಕ ಕನ್ನಡ ನಾಡು, ನುಡಿ, ಸಂಸ್ಕöÈತಿ, ಕಲೆ, ಸಾಹಿತ್ಯವನ್ನು ನಿರಂತರವಾಗಿ ಪೋಷಿಸುತ್ತ ವಿವಿಧ ಕಾರ್ಯಕ್ರಮದ ಮೂಲಕ ಮುಂದಿನ ತಲೆಮಾರಿಗೆ ಕನ್ನಡದ ಶ್ರೇಷ್ಠತೆಯನ್ನು ಪರಿಚಯಿಸುವಂತಹ ಕೆಲಸವನ್ನು ಮಾಡುತ್ತಿದೆ ಎಂದರು.
ಕೊಡಗಿನ ಮಹಿಳಾ ಸಾಹಿತಿಗಳು ಎಂಬ ವಿಷಯದ ಕುರಿತು ನಿವೃತ್ತ ಶಿಕ್ಷಕಿ ಹೆಚ್.ಜಿ. ಸಾವಿತ್ರಿ, ವೀರಾಜಪೇಟೆ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಬಿ.ಬಿ. ಸುನಿಲ್ ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಜೀವನ ಸಾಧನೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು, ವೃತ್ತ ಪತ್ರಿಕೆಗಳನ್ನು ಓದುವುದರಿಂದ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಸಾಧ್ಯ. ಯಾವುದೇ ಕಾರ್ಯಕ್ರಮ, ಸ್ಪರ್ಧೆಯಾದರು ಅದರಲ್ಲಿ ಭಾಗವಹಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಇಂದು ಸೋತರೆ ನಾಳೆ ಗೆಲ್ಲುವ ಛಲ ಬೆಳೆಯುತ್ತದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಅನಾವರಣಕ್ಕೆ ಸಿಗುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು.
ದತ್ತಿದಾನಿ ಮುಲ್ಲೇಂಗಡ ಮಧೂಶ್ ಪೂವಯ್ಯ ಮಾತನಾಡಿದರು. ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ ಅಧ್ಯಕ್ಷೀಯ ನುಡಿಗಳನ್ನಾಡಿದರು. ಇದೇ ಸಂದರ್ಭ ಕನ್ನಡ ವಿಷಯದಲ್ಲಿ ೧೦೦ಕ್ಕೆ ೧೦೦ ಹಾಗೂ ಅಧಿಕ ಅಂಕ ಪಡೆದ ಪದವಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಬಹುಮಾನ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕೋಶಾಧಿಕಾರಿ ಶಬರೀಶ್ ಶೆಟ್ಟಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಸಹ ಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕರಾದ ಕೆ. ಹರಿಣಿ, ಹರೀಶ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.