ಮಡಿಕೇರಿ, ಮಾ. ೨೭: ಕತೆ, ಕಾದಂಬರಿ, ಸಣ್ಣ ಕಥೆಗಳು ರಚಿಸುವಾಗ ಪರಿಸರ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಮನೋಜ್ಞವಾಗಿ ತಮ್ಮ ಕಥೆಗಳನ್ನು ಪ್ರಸ್ತುತ ಪಡಿಸುತ್ತಿದ್ದ ಡಾ. ನಾ ಡಿಸೋಜಾ ಅವರದ್ದು ಸ್ನೇಹಮಯಿ ವ್ಯಕ್ತಿತ್ವ ಎಂದು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಅಂಬೆಕಲ್ ನವೀನ್ ನುಡಿದರು.

ಅವರು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ದತ್ತಿನಿಧಿಗಳ ಮುಖಾಂತರ ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಮಕ್ಕಳಲ್ಲಿ ಸಾಹಿತ್ಯ ಪ್ರಜ್ಞೆ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.

ನಾ.ಡಿಸೋಜ ಮಕ್ಕಳ ಸಾಹಿತ್ಯಗಳ ಕುರಿತು ದತ್ತಿ ಉಪನ್ಯಾಸ ನೀಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಅವರು, ಜಾನಪದ, ಪರಿಸರ, ಮಕ್ಕಳ ಸಾಹಿತ್ಯ, ಮಕ್ಕಳ ಕಥೆಗಳು, ಕಾದಂಬರಿ ಹೀಗೆ ೮೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ನಾ.ಡಿಸೋಜ ರವರು ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಿಕ್ಷಣ ಸಂಯೋಜಕರಾದ ಜಾನೆಟ್ ಐ.ಜಿ ಅವರು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿ ಮೂಡಿಸುತ್ತಿದೆ ಎಂದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲ ಪ್ರಪಂಚವನ್ನು ಸೃಜನಶೀಲತೆಯಿಂದ ಗಮನಿಸುವ ಮೂಲಕ ತಾವು ಸಾಧಿಸುವ ಸಾಧನೆಯಲ್ಲಿ ಮಾನವೀಯತೆ ಮತ್ತು ಪ್ರೀತಿ ವಿಶ್ವಾಸದಿಂದ ಮುನ್ನಡೆಯಬೇಕು ಎಂದರು.

ದತ್ತಿ ಆಶಯದಂತೆ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಸಂತ ಮೈಕಲರ ಶಾಲೆಯ ಕೆ.ಡಿ ವೈಷ್ಣವಿ ಮತ್ತು ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಎ.ಎಲ್.ಜಿ ಕ್ರೆಸೆಂಟ್ ಶಾಲೆಯ ಲೇಖಶ್ರೀ ಮತ್ತು ಹರ್ಷಶ್ರೀ ಪಡೆದುಕೊಂಡರು.

ಕೊಡಗು ಜಿಲ್ಲೆಯಲ್ಲಿ ನಡೆದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂತ ಜೋಸೆಫರ ಶಾಲೆಯ ವಿದ್ಯಾರ್ಥಿಗಳಿಗೆ, ದ್ವಿತೀಯ ಸ್ಥಾನ ಪಡೆದ ಸಂತ ಮೈಕಲರ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ತೃತೀಯ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಂಸ ಪತ್ರ ವಿತರಿಸಲಾಯಿತು.

ಇದೇ ಸಂದರ್ಭ ಕಾಲೇಜಿನಲ್ಲಿ ವಿನೂತನ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಪ್ರಸನ್ನ ಅವÀರನ್ನು ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡು ತಮ್ಮನ್ನು ತಾವು ಬೆಳೆಸಿಕೊಳ್ಳಬೇಕು. ಎಲ್ಲರೂ ಪ್ರಥಮ ಸ್ಥಾನ ಪಡೆಯಲು ಸಾಧ್ಯವಿಲ್ಲ, ಆದರೆ ಮುಂದೊAದು ದಿನ ಪಡೆಯುವ ಪ್ರಯತ್ನವನ್ನು ಮಾಡಬಹುದು ಎಂದರು. ವೇದಿಕೆಯಲ್ಲಿ ಕಸಾಪ ಸಂಘಟನಾ ಕಾರ್ಯದರ್ಶಿ ವಾಸು ರೈ, ಕಾಲೇಜಿನ ಪ್ರಾಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು ಕಸಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ನಿರೂಪಿಸಿ ಸ್ವಾಗತಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವೆಂಕಟೇಶ್ ಪ್ರಸಾದ್ ಅವರು ತಮ್ಮ ಸಹೋದ್ಯೋಗಿಗಳ ಸಹಕಾರದೊಂದಿಗೆ ತಾವು ಬಿಸಿ ಊಟದ ಯೋಜನೆಯನ್ನು ಪ್ರಾರಂಭಿಸಿದ್ದು , ನಮ್ಮ ಕಾಲೇಜಿಗೆ ಬಡ ವಿದ್ಯಾರ್ಥಿಗಳು ಪದವಿ ಪಡೆಯಲು ಬರುತ್ತಿದ್ದು ಕೆಲವೊಮ್ಮೆ ಅವರಿಗೆ ಮಧ್ಯಾಹ್ನದ ಊಟ ತರಲು ಕೂಡ ಸಾಧ್ಯವಾಗದ ಪರಿಸ್ಥಿತಿ ಇತ್ತು. ಅದನ್ನು ಅರಿತು ಈ ಯೋಜನೆಗೆ ಕೈ ಹಾಕಿರುವುದಾಗಿಯೂ, ವಿದ್ಯಾರ್ಥಿಗಳು ತಮ್ಮ ಪದವಿ ಪಡೆದ ತಕ್ಷಣ ಕೆಲಸಕ್ಕಾಗಿ ಹುಡುಕಾಡದೇ ಸುಲಭವಾಗಿ ಕೆಲಸ ಪ್ರಾಪ್ತಿಯಾಗಬೇಕು ಎನ್ನುವ ನಿಟ್ಟಿನಲ್ಲಿ ನಮ್ಮ ಸಹೋದ್ಯೋಗಿಗಳು ಮೂರು ತಿಂಗಳ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸನ್ನು ಇದೇ ಪದವಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದಾರೆ. ಅಲ್ಲದೆ ಸಮಾಜ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ೭೮ ವಿದ್ಯಾರ್ಥಿಗಳು ಟೈಲರಿಂಗ್ ಕೋರ್ಸ್ ಮತ್ತು ೨೦ ವಿದ್ಯಾರ್ಥಿಗಳು ಬ್ಯೂಟೀಷಿನ್ ಕೋರ್ಸ್ನಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಂಬೆಕಲ್ ನವೀನ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ಗೌರವ ಕಾರ್ಯದರ್ಶಿ ರೇವತಿ ರಮೇಶ್, ಸಂಘಟನಾ ಕಾರ್ಯದರ್ಶಿ ವಾಸು ರೈ, ನಿರ್ದೇಶಕರಾದ ಹಂಚಿಟ್ಟಿರ ಫ್ಯಾನ್ಸಿ ಮುತ್ತಣ್ಣ, ಜಿಲ್ಲಾ ಶಿಕ್ಷಣ ಸಂಯೋಜಕರಾದ ಜಾನೆಟ್ ಐ ಜಿ, ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.