ಕುಶಾಲನಗರ, ಏ. ೨ : ಸಾಧಕ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹ ನೀಡುವುದು ಪ್ರತಿಯೊಂದು ಸಂಘಟನೆಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಮಡಿಕೇರಿ ಶಾಸಕ ಡಾ ಮಂತರ್ ಗೌಡ ಹೇಳಿದರು. ಕುಶಾಲನಗರ ಭೂಮಿಕ ಮಹಿಳಾ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಕುಶಾಲನಗರ ಕನ್ನಿಕಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಹಿಳೆಯರು ಸರಕಾರದಿಂದ ಲಭಿಸುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ತಮ್ಮ ಮಕ್ಕಳನ್ನು ಸುಶಿಕ್ಷಿತರನ್ನಾಗಿ ಬೆಳೆಸಬೇಕು ಎಂದು ಕರೆ ನೀಡಿದರು.
ನಿವೃತ್ತ ಪ್ರಾಂಶು ಪಾಲರಾದ ಶಾಂತ ಲಕ್ಷ್ಮಿ ರವಿಕುಮಾರ್ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತನಾಡಿದರು. ಭೂಮಿಕ ಮಹಿಳಾ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷೆ ಫಿಲೋಮಿನಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರಾದ ಎಂ ಎಸ್ ಸ್ವಾತಿ, ಜಯಮ್ಮ ಜವರೇಗೌಡ, ಲೀಲಾವತಿ, ಎಂ ಅಮೃತ ಮತ್ತು ಶೈಲಾ ಕುಶಾಲಪ್ಪ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಂತಿ ಗಣೇಶ ಪ್ರಾರ್ಥಿಸಿ, ಪಾರ್ವತಿ ಸ್ವಾಗತಿಸಿದರು. ವನಿತಾ ಚಂದ್ರಮೋಹನ್ ನಿರೂಪಿಸಿ ವಂದಿಸಿದರು.