ಐಗೂರು, ಏ. ೨: ಹೊಸತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ ೧೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಅಂಜಲಿಕಾ ಅವರನ್ನು ಶಾಲಾ ವತಿಯಿಂದ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕಿ ಅಂಜಲಿಕಾ, ಈ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿರುವುದು ನನಗೆ ಹೆಮ್ಮೆಯ ವಿಷಯ. ನನ್ನ ಸೇವಾವಧಿಯಲ್ಲಿ ಶಾಲಾ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ನೀಡಿದ ಸಹಕಾರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷ ಇಸ್ಮಾಯಿಲ್, ಮುಖ್ಯ ಶಿಕ್ಷಕಿ ಪವಿತ್ರ, ಉಲ್ಲಾಸ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಾ ಚಂದ್ರ, ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಲೀಂ ಹೊಸತೋಟ, ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷ ಚಿದಾನಂದ ಮತ್ತು ಅಧ್ಯಾಪಕ ವೃಂದದವರು ಭಾಗವಹಿಸಿದ್ದರು.