ಸಿದ್ದಾಪುರ, ಏ. 4: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಹ್ಯ - ಕೂಡುಗದ್ದೆ, ಅವರೆಗುಂದ, ಮಾಲ್ದಾರೆ ಗ್ರಾಮ ಸೇರಿದಂತೆ ವಿವಿಧ ಕಡೆಗಳಲ್ಲಿ ಒಟ್ಟು ರೂ. 1 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆಯ ಕಾಮಗಾರಿಗಳಿಗೆ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೆÇನ್ನಣ್ಣ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರವು ವಿಶೇಷ ಅನುದಾನವನ್ನು ನೀಡುತ್ತಿರುವುದರಿಂದ ಕ್ಷೇತ್ರದ ಬಹುತೇಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ ಎಂದರು. ಹಲವಾರು ರಸ್ತೆ ಕಾಮಗಾರಿಯು ಪ್ರಗತಿಯಲ್ಲಿದ್ದು, ಮತ್ತಷ್ಟು ಅನುದಾನವನ್ನು ಸರ್ಕಾರದಿಂದ ಬಿಡುಗಡೆಗೊಳಿಸುವ ಮೂಲಕ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಭರವಸೆ ನೀಡಿದರು. ಸಿದ್ದಾಪುರ ವ್ಯಾಪ್ತಿಯಲ್ಲಿ ಸಾಕಷ್ಟು ಕಾಂಕ್ರೀಟ್ ರಸ್ತೆಗಳ ಕಾಮಗಾರಿ ಮುಕ್ತಾಯಗೊಂಡಿದ್ದು, ಮತ್ತಷ್ಟು ಕ್ರಿಯಾಯೋಜನೆಯನ್ನು ರೂಪಿಸುವ ಮೂಲಕ ಗ್ರಾಮೀಣ ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್, ವೀರಾಜಪೇಟೆ ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಮತೀನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್. ವೆಂಕಟೇಶ್, ಕಾಂಗ್ರೆಸ್ ಪ್ರಮುಖರಾದ ಕೆ.ಯು. ಮಜೀದ್, ಅನಿಲ್ ಸೀನಪ್ಪ, ಚೇಕು, ವಿ.ಕೆ. ಬಶೀರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಇನ್ನಿತರರು ಹಾಜರಿದ್ದರು.