ಮಡಿಕೇರಿ, ಏ. ೨೦: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಇಂಗ್ಲೀಷ್ ವಿಭಾಗ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕೌಶಲ್ಯ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನಿವೃತ್ತ ಡೀನ್ ಫ್ರೊ. ಜೋಸ್ಲಿ ಟಿ ಲೋಬೊ ಅವರು ವಿದ್ಯಾರ್ಥಿಗಳಿಗೆ ಬಿಯಾಂಡ್ ಬುಕ್ಸ್, ಸ್ಕಿಲ್ ಫೊರ್ ದಿ ರಿಯಲ್ ವರ್ಡ್ ವಿಷಯದ ಕುರಿತು ಕಾರ್ಯಾಗಾರ ನಡೆಸಿಕೊಟ್ಟರು. ಈ ಕಾರ್ಯಾಗಾರವನ್ನು ವಿದ್ಯಾರ್ಥಿಗಳ ಕೌಶಲ್ಯ ಹೆಚ್ಚಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಆಯೋಜಿಸಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡರು.
ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಕಾರ್ಯಗಳು ಬಹಳ ಅವಶ್ಯಕವಾಗಿದೆ. ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದಿಂದ ಕೌಶಲ್ಯ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು, ಇದು ವಿದ್ಯಾರ್ಥಿಗಳಿಗೆ ಬಹಳ ಪ್ರಯೋಜನಕಾರಿಯಾಗಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಕಿವಿ ಮಾತು ಹೇಳಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಪ್ರೊ. ತಿಪ್ಪೇಸ್ವಾಮಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ನಯನ ಕಶ್ಯಪ್, ಉಪನ್ಯಾಸಕರಾದ ಪೂಣಚ್ಚ, ಹಳೆ ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಚೀಯಕಪೂವಂಡ ಸಚಿನ್ ಪೂವಯ್ಯ, ಕಾಲೇಜಿನ ವಿವಿಧ ವಿಭಾಗದ ಉಪನ್ಯಾಸಕರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.