ಗೋಣಿಕೊಪ್ಪಲು, ಏ. ೨೭: ದಿನದಿಂದ ದಿನಕ್ಕೆ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆ ಸೂಕ್ತ ಪರಿಹಾರೋಪಾಯಕ್ಕೆ ಒತ್ತಾಯಿಸಿ ವೀರಾಜಪೇಟೆ ಬಿಜೆಪಿ ಮಂಡಲದ ವತಿಯಿಂದ ತಾ. ೨೯ ರಂದು (ನಾಳೆ) ವೀರಾಜಪೇಟೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ವೀರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಪ್ರಧಾನ ಕಾರ್ಯದರ್ಶಿಗಳಾದ ಕುಟ್ಟಂಡ ಅಜಿತ್ ಕರುಂಬಯ್ಯ, ಮುದ್ದಿಯಡ ಮಂಜು ಗಣಪತಿ ತಿಳಿಸಿದ್ದಾರೆ.

ಪೊನ್ನಂಪೇಟೆ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ವನ್ಯಜೀವಿ ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ತತ್ತರಿಸಿದ್ದಾರೆ. ಕಾಡಾನೆ ಹಾಗೂ ಹುಲಿ ದಾಳಿಗೆ ಮಾನವ ಹಾಗೂ ರೈತರ ಜಾನುವಾರುಗಳು ಬಲಿಯಾಗುತ್ತಿವೆ. ಇತ್ತೀಚೆಗೆ ಅರಣ್ಯ ಸಚಿವರು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದರೂ ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ. ಪೊನ್ನಂಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಬಗ್ಗೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ನೀಡಿರುವ ಭರವಸೆಯೂ ಹುಸಿಯಾಗಿದೆ. ಚುನಾವಣಾ ಸಮಯದಲ್ಲಿ ಶಾಸಕ ಪೊನ್ನಣ್ಣ ಆನೆ ಮಾನವ ಸಂಘರ್ಷ ತಡೆಗೆ ಆರು ತಿಂಗಳಲ್ಲಿ ಶಾಶ್ವತ ಪರಿಹಾರ ದೊರಕಿಸಿ ಕೊಡುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಿದ್ದರೂ ಅದು ಕೂಡ ಸುಳ್ಳಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.