ಮಂಗಳೂರು, ಏ. ೨೭: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಸೋಮವಾರ ೧೦ ವರ್ಷ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
೨೦೨೨ರ ನ. ೧೯ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿAದ ಭಾರಿ ಅನಾಹುತವೊಂದು ತಪ್ಪಿತ್ತು. ಸ್ಫೋಟದಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲಾಗಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್ಐಎ ಕೋರ್ಟ್, ಐಪಿಸಿ ಸೆಕ್ಷನ್ ೧೨೧ಎ, ಐಪಿಸಿ ಸೆಕ್ಷನ್ ೩೨೬ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ.