ಸಿದ್ದಾಪುರ, ಏ. ೨೮: ಆಹಾರವನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಗುಂಪಿನಲ್ಲಿದ್ದ ಅಂದಾಜು ಮೂರರಿಂದ ನಾಲ್ಕು ತಿಂಗಳ ಮರಿಯಾನೆಯೊಂದು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಅಭ್ಯತ್ ಮಂಗಲ ಗ್ರಾಮದಲ್ಲಿ ಸಂಭವಿಸಿದೆ.

ಅಭ್ಯತ್‌ಮಂಗಲ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಗುಂಪಿನಲ್ಲಿದ್ದ ಮರಿಯಾನೆ ಅಭ್ಯತ್‌ಮಂಗಲ ಗ್ರಾಮದ ಪುಷ್ಪ ಕಾಫಿ ತೋಟದೊಳಗಿನ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ.

ಈ ಬಗ್ಗೆ ಮಾಹಿತಿ ಪಡೆದುಕೊಂಡ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್ ಮಾರ್ಗದರ್ಶನದಲ್ಲಿ ಮೀನುಕೊಲ್ಲಿ ಶಾಖೆಯ ಉಪವಲಯ ವಲಯ ಅರಣ್ಯ ಅಧಿಕಾರಿ ಸಚಿನ್ ನಿಂಬಾಳ್ಕರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಕೆರೆಯಿಂದ ಮರಿಯಾನೆಯ ಕಳೇಬರವನ್ನು ಹೊರ ತೆಗೆಯಲಾಯಿತು.