ವೀರಾಜಪೇಟೆ, ಮೇ ೯: ಡೊನೇಷನ್ ಹಾವಳಿ ವಿರೋಧಿಸಿ ‘ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ’ವನ್ನು ರಚಿಸುವಂತೆ ಹಾಗೂ ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ವೀರಾಜಪೇಟೆ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಬಳಿಕ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್. ಅವರು, ೨೦೨೬-೨೭ನೇ ಸಾಲಿನಲ್ಲಿ ರಾಜ್ಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಾಗಿತ್ತು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವಂತಹ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ ೧೯೮೩ರ ಶಿಕ್ಷಣ ಕಾಯ್ದೆ ಮತ್ತು ೨೦೦೯ರ ಆರ್.ಟಿ.ಇ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡುವುದರ ಮೂಲಕ ಹಗಲು ದರೋಡೆ ಮಾಡಲಾಗಿದೆ.

ಶಿಕ್ಷಣ ಹಕ್ಕು ಕಾಯ್ದೆ-೧೯೮೩ ಮತ್ತು ೨೦೦೯ರ ಆರ್.ಟಿ.ಇ ಕಾಯ್ದೆ ಜಾರಿಯಾದರೂ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಬಹುತೇಕ ಖಾಸಗಿ ಶಾಲೆಗಳಲ್ಲಿ ಲಕ್ಷಾಂತರ ರೂಪಾಯಿಗಳವರೆಗೂ ಹಣ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ನಡೆಯುತ್ತಿದೆ. ಅಕ್ರಮವಾಗಿ ಟ್ಯೂಷನ್, ಟ್ಯೂಟೋರಿಯಲ್ಸ್ ಎಂದರು.

ಕಾರ್ಯದರ್ಶಿ ವಿಜಯಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ ಫ್ಲೆಕ್ಸ್ನಲ್ಲಿ ಪ್ರಕಟಿಸಬೇಕೆಂದು ಹಾಗೂ ಇದೇ ಮಾಹಿತಿಯನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದರೆ, ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿಲ್ಲ. ಸರ್ಕಾರದ ಸುತ್ತೋಲೆಯಲ್ಲಿ ಡಿ.ಡಿ.ಪಿ.ಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇದನ್ನು ಪರಿಶೀಲಿಸಬೇಕೆಂದು ಹೇಳಿದ್ದರೂ ಇಲಾಖಾ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಣಿದು ಸರಿಯಾಗಿ ಪರಿಶೀಲನೆ ಮಾಡಿರುವುದಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಡಿವೈಎಫ್‌ಐ ರಾಜ್ಯಾಧ್ಯಕ್ಷೆ ಲವಿತ್ರ ವಸ್ತçದ್, ಎಸ್‌ಎಫ್‌ಐ ರಾಜ್ಯ ಜಂಟಿ ಕಾರ್ಯದರ್ಶಿ ವಿನುಷ್ ರಮಣ, ಅನಂತರಾಜ್, ಮುಖಂಡರಾದ ರಮೇಶ್ ವಿರಾಪೂರ, ಮಂಜುನಾಥ ಡಗ್ಗಿ, ಸಾದಿಕ್, ಚಂದ್ರಶೇಖರ್, ರಾಘವೇಂದ್ರ, ದಿಲೀಪ್, ಮಿಥುನ್ ಎಮ್, ಸಾಕ್ಷಿ ಎಸ್, ಗೌತಮಿ ಎಮ್, ಎ.ಸಿ. ಸಾಬು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.