ಮಡಿಕೇರಿ, ಮೇ ೨೯: ಕಳೆದ ಮೂರು ವರ್ಷಗಳ ಅವಧಿಯಲ್ಲಿ ವೀರಾಜಪೇಟೆ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಶ್ವೇತಪತ್ರವನ್ನು ಶಾಸಕರು ತಕ್ಷಣ ಬಿಡುಗಡೆ ಮಾಡಬೇಕೆಂದು ವೀರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತೇ ಹೊರತು ಇಲ್ಲಿಯವರೆಗೆ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಸಾಮಾಜಿಕ ಜಾಲಾತಾಣಗಳಲ್ಲಿ ಮಾತ್ರ ಕೋಟಿಗಟ್ಟಲೆ ಅನುದಾನದ ಸುಳ್ಳು ಪ್ರಚಾರ ನೀಡಿ ಜನರ ಹಾದಿ ತಪ್ಪಿಸಲಾಗುತ್ತಿದೆ. ಇದೀಗ ೧೫೦ ಕೋಟಿ ರೂ.ಗಳ ಅನುದಾನದ ಬಗ್ಗೆ ಪ್ರಚಾರ ನೀಡಲಾಗುತ್ತಿದೆಯಾದರೂ ಮಳೆಯ ನೆಪವೊಡ್ಡಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಗ್ರಾ.ಪಂ. ಮಾಡಬಹುದಾದ ಕಾಮಗಾರಿಗಳನ್ನು ಮಾಡಿ ಸಾಧನೆ ಮಾಡಿದಂತೆ ಪ್ರತಿಬಿಂಬಿಸಿಕೊಳ್ಳಲಾಗುತ್ತಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕಾರ್ಯವನ್ನು ಶಾಸಕರು ಮಾಡುತ್ತಿಲ್ಲ. ಕ್ಷೇತ್ರದಲ್ಲಿರುವ ಬಡವರಿಗೆ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿ ಮೂರು ವರ್ಷವೇ ಕಳೆದಿದ್ದರೂ ಇಲ್ಲಿಯವರೆಗೆ ನಿವೇಶನ ಹಂಚಿಕೆ ಮಾಡಿಲ್ಲ. ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಬಡವರು ಹಾಗೂ ಕೂಲಿ ಕಾರ್ಮಿಕರು ಸೂರಿಗೆ ಪ್ರತಿಭಟನೆ ನಡೆಸುತ್ತಿರುವುದು ಸಾಮಾನ್ಯವಾಗಿದೆ.