ಸಿದ್ದಾಪುರ, ಮೇ ೩೦: ತಿತಿಮತಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಗ್ರಾಮಸ್ಥರಿಗೆ ತಿತಿಮತಿ ವಲಯ ಅರಣ್ಯ ಇಲಾಖೆ ವತಿಯಿಂದ ಮಾನವ-ವನ್ಯಜೀವಿ ಸಂಘರ್ಷ ಉಪಶಮನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ತಿತಿಮತಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಬಾಡಗ-ಬಾಣಂಗಾಲ ಗ್ರಾಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್, ರೈತರಿಗೆ ಹಾಗೂ ಕಾರ್ಮಿಕರಿಗೆ ವನ್ಯಜೀವಿಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿ, ಮುಂಜಾಗ್ರತೆ ವಹಿಸಿ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದರು.

ವನ್ಯಜೀವಿಗಳ ಹಾವಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಿನನಿತ್ಯ ಪ್ರಯತ್ನ ಪಡುತ್ತಿದ್ದಾರೆ. ಗ್ರಾಮಸ್ಥರು ಕೂಡ ಎಚ್ಚರಿಕೆ ವಹಿಸುವುದು ಸೂಕ್ತ ಎಂದರು.

ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಮಠ ಪೈಸಾರಿ ಬಜೆಗೊಲ್ಲಿ, ಹುಂಡಿ ಮಾರ್ಗೊಳ್ಳಿ ಗ್ರಾಮದ ಗ್ರಾಮಸ್ಥರು, ರೈತರು ಆಗಮಿಸಿದ್ದರು. ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಹೆಚ್ ಜಗನ್ನಾಥ, ಉಪ ವಲಯ ಅರಣ್ಯ ಅಧಿಕಾರಿ ಶಶಿ ಪಿ.ಟಿ ಹಾಗೂ ಅರಣ್ಯ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳು ಇನ್ನಿತರರು ಹಾಜರಿದ್ದರು.