ಬೆಂಗಳೂರು, ಜೂ. ೩: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ಇನ್ನು ಮುಂದೆ ವಿದ್ಯಾರ್ಥಿನಿಯರಂತೆ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶೀಘ್ರದಲ್ಲೇ ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಕರೆಯಲಾಗುವುದು ಎಂದರು. ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ‘ಭಾರತ್ ಜೋಡೋ ಯುವಕ ಸಂಘ’ ರಚನೆ ಮಾಡುವ ಚಿಂತನೆ ಇದೆ. ರಾಜ್ಯಾದ್ಯಂತ ಒಟ್ಟು ೧೦ ಸಾವಿರ ಯುವಕರ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಪ್ರತಿ ಸಂಘಕ್ಕೆ ಸರ್ಕಾರದಿಂದ ೧೦ ಲಕ್ಷ ರೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು. ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ಅನಧಿಕೃತ ಕಟ್ಟಡಗಳಿಗೆ ಎ-ಖಾತಾ ದಾಖಲೆ ನೀಡುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ ಎಂದರು.