ಪೊನ್ನಂಪೇಟೆ, ಜೂ. ೫: ಪೊನ್ನಂಪೇಟೆ ಹಳ್ಳಿಗಟ್ಟು ಕೂರ್ಗ್ ಇನ್‌ಸ್ಟಿಟ್ಯೂಟ್ ಪಿಯು ಕಾಲೇಜಿನಲ್ಲಿ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ವಿಶೇಷ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಪೊನ್ನಂಪೇಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ನವೀನ್ ಜಿ. ಅವರು ಭಾಗವಹಿಸಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾದಕ ವಸ್ತು ಮಾರಾಟ ಮತ್ತು ಸೇವನೆ ಕಾನೂನುಬಾಹಿರ ಚಟುವಟಿಕೆಯಾಗಿದ್ದು, ಇದು ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ದುರ್ವ್ಯಸನಗಳಿಗೆ ತುತ್ತಾಗಬಾರದು ಎಂದು ಹೇಳಿದರು.

ಇದೇ ವೇಳೆ ಸೈಬರ್ ಅಪರಾಧದ ಬಗ್ಗೆ ಜಾಗೃತಿ ಮೂಡಿಸಿದ ಅವರು, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳಬಾರದು ಮತ್ತು ವಂಚಕರ ಆಮಿಷಗಳಿಗೆ ಬಲಿಯಾಗಬಾರದು ಎಂದು ಎಚ್ಚರಿಸಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.

ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಉಪನ್ಯಾಸಕಿ ಕಾವ್ಯಶ್ರೀ ಸಂಯೋಜಿಸಿದ್ದರು. ವಿದ್ಯಾರ್ಥಿ ಆಸ್ಟಿನ್ ಮ್ಯಾನುಯೆಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.