ಸುಂಟಿಕೊಪ್ಪ, ಜೂ. ೫: ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತರಾಗಿ ಜೀವಿಸಲು ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಸಾಧ್ಯವೆಂದು ಮಡಿಕೇರಿ ಜಿಲ್ಲಾ ಪೊಲೀಸ್ ಕಚೇರಿಯ ಮಕ್ಕಳ ವಿಶೇಷ ಪೊಲೀಸ್ ಘಟಕದ ಮುಖ್ಯಪೇದೆ ಸತ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ವಲಯದ ಮಾದಾಪುರ ಕಾಂಡನಕೊಲ್ಲಿ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮವನ್ನು ಮಾದಾಪುರದ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಈ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತಂಬಾಕು, ಗುಟ್ಕಾದಂತಹ ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್‌ನಂತಹ ಕಾಯಿಲೆ ಬರುತ್ತದೆ. ಆದ್ದರಿಂದ ಮಕ್ಕಳು ದುಶ್ಚಟಕ್ಕೆ ಬಲಿಯಾಗದಂತೆ ಪೋಷಕರು ನೋಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ವಿಶಾಲಾಕ್ಷಿ ವಹಿಸಿದ್ದರು. ಮಾಹಿತಿ ಕಾರ್ಯಾಗಾರದ ಉದ್ಘಾಟನೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಟಿ.ಎಂ. ಅಯ್ಯಪ್ಪ ನೆರವೇರಿಸಿದರು.

ಸಮದಾಯ ಆರೋಗ್ಯ ಕೇಂದ್ರ ಅಧಿಕಾರಿ ಮನೋಜ್ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲಿನ ದುಷ್ಪಾರಿಣಾಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪುರುಷೋತ್ತಮ್, ಒಕ್ಕೂಟದ ಅಧ್ಯಕ್ಷೆ ಪದ್ಮಾ, ಮೇಲ್ವಿಚಾರಕ ವಿನೋದ, ಸೇವಾಪ್ರತಿನಿಧಿ ರಜನಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.