ಮಡಿಕೇರಿ, ಜೂ. ೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆಯು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಉದ್ಘಾಟಿಸಿ ಯುವ ಸಮೂಹವು ಇತ್ತೀಚಿನ ದಿನಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಗೆ ಒಳಗಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು, ಅಂತಹ ಯುವ ಸಮೂಹಕ್ಕೆ ಹೆಚ್ಚು ಜಾಗೃತಿ ಮೂಡಿಸಿ ಇಂತಹ ದುಶ್ಚಟಗಳಿಂದ ಹೊರತರಬೇಕಾಗಿದೆ ಎಂದು ನುಡಿದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ. ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತಂಬಾಕು ವ್ಯಸನದಿಂದ ಸಮಾಜದ ಸ್ವಾಸ್ಯ÷್ಥ ಹಾಳಾಗುತ್ತಿರುವುದರಿಂದ ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸಿ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ .ಕೆ.ಎಂ ಸತೀಶ್ ಕುಮಾರ್ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯಿದೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶ್ರೀನಿವಾಸ್ ಬಿ.ಎಲ್. ವಿಶ್ವ ತಂಬಾಕು ರಹಿತ ದಿನಾಚರಣೆಯ ಮಹತ್ವದ ಕುರಿತು ವಿವರಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ. ರವೀಂದ್ರ ರೈ ಮಾತನಾಡಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ರಾಮಚಂದ್ರ ಕಾಮತ್ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜು ವಿದ್ಯಾರ್ಥಿಗಳಿಗೆ ವಿಶ್ವ ತಂಬಾಕು ರಹಿತ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು.

ವಿಶ್ವ ತಂಬಾಕು ರಹಿತ ದಿನಾಚರಣೆ ೨೦೨೬ಯ ಪ್ರತಿಜ್ಞಾ ವಿಧಿ ಬೋಧನೆಯನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕ ಡಾ. ಮಹೇಶ್ ನೆರವೇರಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆ, ಚಿತ್ರಕಲೆ ಸ್ವರ್ಧೆ, ಕ್ವಿಜ್ ಮತ್ತು ಪಿಕ್ ಅಂಡ್ ಸ್ಪೀಚ್ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಗಣ್ಯರಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಹಾಗೂ ಬೋಧಕ ಆಸ್ಪತ್ರೆಯ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.