ಮಡಿಕೇರಿ, ಜೂ.೭: ಕರ್ನಾಟಕ ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಗೌರವಯುತವಾಗಿ ಬಾಳ್ವೆ ನಡೆಸಲು ಬೇಕಾದ ಎಲ್ಲಾ ಸವಲತ್ತುಗಳನ್ನು ಆದ್ಯತೆ ಮೇರೆಗೆ ಒದಗಿಸುತ್ತಾ ಬಂದಿದೆ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕು ೧೮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಆಯ್ಕೆ ಆಗಿರುವ ಅರ್ಹ ಫಲಾನುಭವಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿ ಆದೇಶ ಪ್ರತಿ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು ೪೦೦ ಕ್ಕೂ ಅಧಿಕ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿ ಅವರು ಮಾತನಾಡಿದರು.
ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ನೀಡುವುದು ಸರ್ಕಾರದ ಕರ್ತವ್ಯ. ನಿವೇಶನ ರಹಿತರು, ವಸತಿ ರಹಿತರಿಗೆ ಆದ್ಯತೆ ಮೇರೆಗೆ ಸ್ವಂತ ಸೂರು ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಹಲವಾರು ಜನಪರ ಯೋಜನೆಗಳೊಂದಿಗೆ ವಸತಿ ನೀಡುವ ಯೋಜನೆಗೂ ಮಹತ್ವ ನೀಡಿದೆ.
ಹಿಂದಿನ ವಸತಿ ಸಚಿವರಾದ ಜಮೀರ್ ಅಹಮ್ಮದ್ ಅವರು ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಸಂಪುಟಗಳ ಸದಸ್ಯರ ಸಹಕಾರದಿಂದ ಜಿಲ್ಲೆಗೆ ಮನೆ ನಿರ್ಮಾಣಕ್ಕೆ ಅನುದಾನ ದೊರೆತಿದೆ ಎಂದು ಎ.ಎಸ್. ಪೊನ್ನಣ್ಣ ಅವರು ವಿವರಿಸಿದರು.
ಮಡಿಕೇರಿ ತಾಲೂಕು ಪಂಚಾಯಿತಿ ಇ.ಒ ಶೇಖರ್ ಮಾತನಾಡಿ, ಶಾಸಕ ಎ.ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಜಿಲ್ಲೆಗೆ ೧೨೦೦ ಮನೆಗಳ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ಸಿಕ್ಕಿದೆ. ವೀರಾಜಪೇಟೆ ಕ್ಷೇತ್ರ ಭೌಗೋಳಿಕವಾಗಿ ಹೆಚ್ಚಿನ ವಿಸ್ತೀರ್ಣ ಹೊಂದಿರುವುದರಿAದ ವಿರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕಿನಲ್ಲಿ ೫೨೭ ಮನೆಗಳ ನಿರ್ಮಾಣಕ್ಕೆ ಮುಂದಾಗಿದೆ. ಮೊದಲ ಹಂತದಲ್ಲಿ ವೀರಾಜಪೇಟೆ ವಿಧಾನಸಭಾ ವ್ಯಾಪ್ತಿಯ ಪೆರಾಜೆ, ಚೆಂಬು, ಸಂಪಾಜೆ, ಮದೆ, ಬೆಟ್ಟಗೇರಿ, ಚೇರಂಬಾಣೆ, ಕುಂದಚೇರಿ ಭಾಗಮಂಡಲ, ಕರಿಕೆ, ಅಯ್ಯಂಗೇರಿ, ಬಲ್ಲಮಾವಟಿ, ಎಮ್ಮೆಮಾಡು ನಾಪೋಕ್ಲು, ಕುಂಜಿಲ-ಕಕ್ಕಬ್ಬೆ, ನರಿಯಂದಡ, ಹಾಕತ್ತೂರು, ಮೇಕೇರಿ, ಕೊಣಂಜಗೇರಿ ಗ್ರಾ.ಪಂ.ವ್ಯಾಪ್ತಿಯ ೪೨೭ ಅರ್ಹ ಕುಟುಂಬಗಳಿಗೆ ಶಾಶ್ವತ ಸೂರು ಒದಗಿಸುವ ಸಂಬAಧ ಪ್ರಯತ್ನ ನಡೆದಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದಿಂದ ನಿವೇಶನ ಗುರುತಿಸಿ ಫಲಾನುಭವಿಗಳಿಗೆ ಮನೆ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಮಡಿಕೇರಿ ತಾಲೂಕು ಅಭಿವೃದ್ಧಿ ಮತ್ತು ಯೋಜನೆಗಳ ಸಮಿತಿಯ ಉಪಾಧ್ಯಕ್ಷ ಬಾಲಚಂದ್ರ ನಾಯರ್, ಕೊಡಗು ಜಿಲ್ಲಾ ಪಂಚಾಯಿತಿ ಯೋಜನೆ ನಿರ್ದೇಶಕ ಜೀವನ್ ಕುಮಾರ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ರಫೀಕ್, ಕಕ್ಕಬ್ಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ ಮತ್ತಿತರರು ಇದ್ದರು.