ಮಡಿಕೇರಿ, ಜೂ. ೯: ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ವಿಪತ್ತು ನಿರ್ವಹಣೆ ಸಂಬAಧ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಡಾ. ಮಂತರ್ ಗೌಡ ಸೂಚಿಸಿದರು.

ನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳು, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ‘ಕಾರ್ಯಪಡೆ ಸಮಿತಿ ಸಭೆ’ ನಡೆಸಿ ಅವರು ಮಾತನಾಡಿದರು.

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರವಹಿಸಬೇಕು. ಮಳೆ ನೀರು ಸರಾಗವಾಗಿ ಹರಿಯುವಂತಾಗಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾಲುವೆ, ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಆಗಬೇಕು. ರಸ್ತೆ ಬದಿ ಚರಂಡಿಯಲ್ಲಿ ಸರಾಗವಾಗಿ ನೀರು ಹರಿಯುವಂತಾಗಲು ಶುಚಿಗೊಳಿಸುವ ಕಾರ್ಯ ಮಾಡಬೇಕು ಎಂದು ಸಂಬAಧಪಟ್ಟ ಇಂಜಿನಿಯರ್‌ಗಳಿಗೆ ಶಾಸಕರು ಸೂಚಿಸಿದರು.

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು. ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರಿಗೆ ಮುನ್ನೆಚ್ಚರಿಕೆ ವಹಿಸುವ ಸಂಬAಧ ಮಾಹಿತಿ ನೀಡಿ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು. ನೋಡಲ್ ಅಧಿಕಾರಿಗಳು, ಪಿಡಿಒ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ದೂರವಾಣಿ ಸಂಖ್ಯೆಯ ಮಾಹಿತಿ ಸ್ಥಳೀಯರಿಗೆ ಇರಬೇಕು.

ಸ್ವಯಂ ಸೇವಕರ ನಿಯೋಜನೆ ಸೇರಿದಂತೆ ಸ್ಥಳೀಯ ಮಟ್ಟದಲ್ಲಿ ಸಂವಹನ ಮತ್ತು ಸಂಪರ್ಕಕ್ಕೆ ಸದಾ ಸಿದ್ಧವಿರಬೇಕು. ಅಗ್ನಿಶಾಮಕ, ಲೋಕೋಪಯೋಗಿ, ಪಂಚಾಯತ್ ರಾಜ್, ಕಂದಾಯ, ಅರಣ್ಯ ಹೀಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಮರ ಬಿದ್ದ ಸಂದರ್ಭದಲ್ಲಿ ತೆರವುಗೊಳಿಸುವುದು, ಸುಗಮ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡುವುದು, ಹೆಚ್ಚಿನ ಗಾಳಿ-ಮಳೆ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ಬೀಳುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರವಹಿಸಬೇಕು ಎಂದರು.

ಕಾಳಜಿ ಕೇಂದ್ರಗಳಲ್ಲಿ ಆಹಾರ ದಾಸ್ತಾನು ಮಾಡಿಕೊಳ್ಳಬೇಕು. ಗುಣಮಟ್ಟದ ಆಹಾರ ಪೂರೈಸಬೇಕು. ಶಾಲೆಯ ಮುಖ್ಯೋಪಾಧ್ಯಾಯರು ಅಗತ್ಯ ಸಹಕಾರ ನೀಡಬೇಕು.

ಆಯಾಯ ಗ್ರಾ.ಪಂ.ವ್ಯಾಪ್ತಿಯಲ್ಲಿ ಜಾನುವಾರು ರಕ್ಷಣೆಗೆ ಗೋರಕ್ಷಣಾ ಕೇಂದ್ರ ಆರಂಭಕ್ಕೆ ಮುಂದಾಗಬೇಕು. ಅಗತ್ಯ ಮೇವು ಪೂರೈಕೆಗೆ ಕ್ರಮವಹಿಸಬೇಕು.

ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಗಮನಹರಿಸಬೇಕು. ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಅರಣ್ಯ ಹೀಗೆ ವಿವಿಧ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕರು ಸೂಚಿಸಿದರು.

ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳು, ಅಂಗನವಾಡಿ ಹಾಗೂ ಶಾಲೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಗಮನಹರಿಸಬೇಕು ಎಂದು ಸಲಹೆ ಮಾಡಿದರು. ಶಾಲೆಗಳಿಗೆ ಮಕ್ಕಳು ಬಸ್ಸು, ವ್ಯಾನ್ ಅಥವಾ ನಡೆದುಕೊಂಡು ಹೋಗುತ್ತಾರೆಯೇ ಎಂಬ ಬಗ್ಗೆ ಅಧಿಕಾರಿಗಳಲ್ಲಿ ಮಾಹಿತಿ ಇರಬೇಕು.

ಪ್ರತೀ ಗ್ರಾ.ಪಂ.ಯಲ್ಲಿ ಆಡಳಿತಾಧಿಕಾರಿಗಳು ಸಭೆ ನಡೆಸಿ ವರದಿ ನೀಡಬೇಕು. ಅಗತ್ಯವಿರುವ ಕಡೆ ಟಾರ್ಪಲ್ ವಿತರಿಸುವಂತಾಗಬೇಕು. ಸಹಾಯವಾಣಿ ಕೇಂದ್ರ ತೆರೆದು ಮಾಹಿತಿ ನೀಡಬೇಕು ಎಂದರು. ಡಾ.ಮಂತರ್ ಗೌಡ ನಿರ್ದೇಶನ ನೀಡಿದರು.

ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಮಾತನಾಡಿ ನಗರಸಭೆ ವ್ಯಾಪ್ತಿಯ ಎಲ್ಲಾ ಬಡಾವಣೆಗಳಲ್ಲಿ ಗಿಡಗಂಟೆಗಳನ್ನು ಕಡಿಯುವ ಕೆಲಸ ಮಾಡಲಾಗುತ್ತಿದೆ. ಕಾಲುವೆ ಹಾಗೂ ಚರಂಡಿ ಶುಚಿಗೊಳಿಸುವ ಕಾರ್ಯ ನಡೆದಿದೆ. ಭೂಕುಸಿತ ಪ್ರದೇಶಗಳಲ್ಲಿನ ಜನರಿಗೆ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಕ್ಕೆ ಮಾಹಿತಿ ನೀಡಲಾಗಿದೆ ಎಂದರು.

ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮಾತನಾಡಿ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬೀಳುವ ಹಂತದಲ್ಲಿರುವ ಮರದ ಕೊಂಬೆಗಳನ್ನು ತೆರವುಗೊಳಿಸಲು ಅನುಮತಿ ನೀಡುವಂತಾಗಬೇಕು ಎಂದು ಕೋರಿದರು. ತಾ.ಪಂ.ಇಒ ಶೇಖರ್ ಮಾತನಾಡಿ ಸೂಕ್ಷö್ಮ ಹಾಗೂ ಪ್ರವಾಹ ಪೀಡಿತ ಪ್ರದೇಶದಲ್ಲಿ ವಾಸಿಸುವ ಸಂತ್ರಸ್ತರಿಗೆ ಆಯಾಯ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿ, ಮನೆ ನಿರ್ಮಿಸಿಕೊಡಲು ಪ್ರಯತ್ನಗಳು ನಡೆದಿವೆ ಎಂದರು.

ತಹಶೀಲ್ದಾರ್ ಶ್ರೀಧರ ಮಾತನಾಡಿ ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಬಗ್ಗೆ ಗಮನಹರಿಸಲಾಗಿದೆ ಎಂದರು. ಪೌರಾಯುಕ್ತ ಎಚ್.ಆರ್.ರಮೇಶ್ ಮಡಿಕೇರಿ ನಗರದಲ್ಲಿ ಮಳೆಗಾಲಕ್ಕಾಗಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಇಂಜಿನಿಯರ್‌ಗಳು, ಪಿಡಿಒಗಳು, ಮಳೆಗಾಲದಲ್ಲಿ ವಹಿಸಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.