ಮಡಿಕೇರಿ, ಜೂ. ೧೦: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಮೈಸೂರಿನ ಮಹಾರಾಜ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಆಚರಿಸಲಾಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮರೆಯಲು ಅಸಾಧ್ಯವಾದಂತಹ ದಿವ್ಯ ಚೇತನ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ಅವರು ಕನ್ನಡ ನಾಡಿಗೆ ಮಾಡಿದ ಸೇವೆಯನ್ನು ಎಷ್ಟು ವರ್ಣಿಸಿದರೂ ಸಾಲದು. ಇಂದು ಶತಮಾನೋತ್ಸವ ಆಚರಿಸುತ್ತಿರುವ ಎಲ್ಲ ಸಂಘ-ಸAಸ್ಥೆಗಳನ್ನು ಪ್ರಾರಂಭಿಸಿದ್ದು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತನ್ನು ಮಾತ್ರ ಇವರು ಸ್ಥಾಪಿಸಲಿಲ್ಲ. ಇತ್ತೀಚೆಗೆ ಶತಮಾನೋತ್ಸವ ಆಚರಿಸಿದ ರಾಜ್ಯಮಟ್ಟದ ಎಲ್ಲ ಸಂಸ್ಥೆಗಳ ಸ್ಥಾಪಕರು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ, ನೀರಿನ ಸೌಕರ್ಯ, ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಂಆಡಳಿತ ಸಂಸ್ಥೆಗಳಾದವು. ಹೊಸ ರೈಲು ದಾರಿಗಳ ನಿರ್ಮಾಣಗಳಾದವು.
ದೇಶದಲ್ಲಿ ಆಗಿ ಹೋದ ಎಲ್ಲಾ ರಾಜರುಗಳಿಗೆ ಜನಸೇವೆಯಲ್ಲಿ ಅಗ್ರಗಣ್ಯರಾಗಿ ನಿಲ್ಲುವವರು ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಸಂಘಟನಾ ಕಾರ್ಯದರ್ಶಿ ವಾಸು ರೈ, ಕುಶಾಲನಗರ ತಾಲೂಕು ಗೌರವ ಕೋಶಾಧಿಕಾರಿ ಕೆ.ವಿ. ಉಮೇಶ್, ಸದಸ್ಯರುಗಳಾದ ಭಾರತಿ ರಮೇಶ್, ರೇಣುಕಾ, ಅಜಯ್ ಪಾಲ್ಗೊಂಡಿದ್ದರು.