ಸಿದ್ದಾಪುರ, ಜೂ. ೧೧: ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಮಾಲ್ದಾರೆ ಅರಣ್ಯ ಪ್ರದೇಶಗಳಿಗೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಲ್ದಾರೆ ಗ್ರಾಮದಲ್ಲಿ ಕಾಡಾನೆಗಳು ಹಾಗೂ ಹುಲಿ ಸಂಚರಿಸುವ ಕುರಿತು ಮಾಹಿತಿ ಸಂಗ್ರಹಿಸಿದರು.

ಜನವಸತಿ ಪ್ರದೇಶಗಳಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಭಿಷೇಕ್, ರಾತ್ರಿ ಸಮಯದಲ್ಲಿ ವನ್ಯ ಪ್ರಾಣಿಗಳು ಸಂಚರಿಸುತ್ತಿದ್ದು, ಈ ಬಗ್ಗೆ ನಿಗಾವಹಿಸಬೇಕಾಗಿದೆ. ಕಾಡಾನೆಗಳು ತೋಟಕ್ಕೆ ಹಾಗೂ ಕೃಷಿ ಭೂಮಿಗಳಿಗೆ ನುಗ್ಗಿ ದಾಂಧÀಲೆ ನಡೆಸುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕಾಡಾನೆಗಳು ಸಂಚರಿಸುವ ಮಾರ್ಗವನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಆನೆ- ಮಾನವ ಸಂಘರ್ಷ ತಡೆಗೆ ಮುಂದಾಗಬೇಕು ಎಂದು ಸೂಚನೆ ನೀಡಿದರು. ಅರಣ್ಯ ಇಲಾಖೆಯ ವತಿಯಿಂದ ಎಲ್ಲ ರೀತಿಯ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಗ್ರಾಮಸ್ಥರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಅಭಿಷೇಕ್ ಹೇಳಿದರು. ಈ ಸಂದರ್ಭದಲ್ಲಿ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್ ಹಾಗೂ ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್, ಹಾಗೂ ಉಪವಲಯ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.