ಸಿದ್ದಾಪುರ, ಜೂ. ೧೨: ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಹಡ್ಲು ಹಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಮೋರಿ ಕುಸಿದಿದ್ದು ಈ ಭಾಗದ ನಿವಾಸಿಗಳಿಗೆ ಸಮಸ್ಯೆ ಎದುರಾಗಿದೆ ಇದನ್ನು ಕೂಡಲೇ ದುರಸ್ತಿ ಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮಾಲ್ದಾರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕುಂಞ್ಞಣ್ಣ ಒತ್ತಾಯಿಸಿದ್ದಾರೆ.
ಕಳೆದ ಹತ್ತು ವರ್ಷಗಳ ಹಿಂದೆ ಈ ಮೋರಿಯನ್ನು ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಾಣ ಮಾಡಲಾಗಿತ್ತು. ಕಳೆದ ಕೆಲವು ವರ್ಷಗಳ ಹಿಂದೆ ಕಾವೇರಿ ನೀರಾವರಿ ನಿಗಮದ ವತಿಯಿಂದ ಈ ಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವ ಸಂದರ್ಭ ಮೋರಿಯ ಮೇಲೆ ಕಾಂಕ್ರೀಟ್ ಹಾಕಲಾಗಿತ್ತು ಎನ್ನಲಾಗಿದೆ. ಇದೀಗ ಮೋರಿ ಕುಸಿದಿದ್ದು, ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾದಲ್ಲಿ ಮತ್ತಷ್ಟು ಕುಸಿಯುವ ಭೀತಿ ಎದುರಾಗಿದೆ.ಕೂಡಲೇ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳು ಗಮನ ಹರಿಸಿ ಮೋರಿಯನ್ನು ದುರಸ್ತಿ ಪಡಿಸಬೇಕೆಂದು ಹಾಗೂ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.