ಸಿದ್ದಾಪುರ, ಜೂ. ೧೪: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.) ಅಂಗವಾಗಿ ವೀರಾಜಪೇಟೆ ತಾಲೂಕು ಆಡಳಿತ ವತಿಯಿಂದ ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.

ಭಾರತ ಚುನಾವಣಾ ಆಯೋಗವು ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಅಧಿಸೂಚನೆಯನ್ನು ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕೂಡ ಕಾರ್ಯದ ನಿರ್ವಹಣೆ ಕುರಿತು ವಿಸ್ತಾರವಾದ ತರಬೇತಿಯನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ ವೀರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಮಾರ್ಗದರ್ಶನದಲ್ಲಿ ಅಮ್ಮತ್ತಿ ಹೋಬಳಿ ವ್ಯಾಪ್ತಿಯ ಬೂತ್ ಮಟ್ಟದ ಏಜೆಂಟ್ ಅವರಿಗೂ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿಯಲ್ಲಿ ಮಾಹಿತಿಯನ್ನು ನೀಡಲಾಯಿತು. ಎಸ್.ಐ.ಆರ್. ಕುರಿತು ಪಾಲಿಬೆಟ್ಟದ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಿವದಾಸ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅಮ್ಮತ್ತಿ ಹೋಬಳಿ ಉಪತಹಶೀಲ್ದಾರ್ ಲೋಕೇಶ್, ಚುನಾವಣೆ ಶಿರಸ್ತೇದಾರ್ ಗಣೇಶ್, ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು. ಕಾರ್ಯಕ್ರಮಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಕಾರ್ಯಕರ್ತರು ಪಾಲ್ಗೊಂಡು ಮಾಹಿತಿ ಪಡೆದುಕೊಂಡರು.