ಸೋಮವಾರಪೇಟೆ,ಜೂ.೧೪: ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭ ಸಣ್ಣ ತಪ್ಪಿನಿಂದಾಗಿ ಕೊಡಗಿನಲ್ಲಿ ಭಾರತೀಯ ಜನತಾ ಪಾರ್ಟಿ ಹಿನ್ನಡೆ ಅನುಭವಿಸಿದೆ. ಮುಂದೆ ಅಂತಹ ತಪ್ಪುಗಳಿಗೆ ಅವಕಾಶ ನೀಡದೇ ಜಿಲ್ಲೆಯಲ್ಲಿ ಬಿಜೆಪಿಯನ್ನು ಬಲಪಡಿಸಿ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದರು.
ತಾಲೂಕಿನ ಶನಿವಾರಸಂತೆ ಸಮೀಪದ ಗುಡುಗಳಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಅಲ್ಲಿನ ಖಾಸಗಿ ರೆಸಾರ್ಟ್ವೊಂದರಲ್ಲಿ ನಡೆದ ಕೊಡಗು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಉಪಸ್ಥಿತರಿದ್ದು ಅವರು ಮಾತನಾಡಿದರು.
ಬಿಜೆಪಿ ಸಂಘಟನೆಯಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಈ ಹಿಂದೆ ಸಣ್ಣ ತಪ್ಪಿನಿಂದ ಎರಡೂ ಕ್ಷೇತ್ರವನ್ನು ನಾವು ಕಳೆದುಕೊಂಡಿದ್ದೇವೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಬಿಜೆಪಿ ಸಂಘಟನೆಯನ್ನು ಮತ್ತಷ್ಟು ಶಕ್ತಿದಾಯಕವಾಗಿ ಬೆಳೆಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಸದ್ಯದಲ್ಲಿ ಮೂರನೇ ಮುಖ್ಯಮಂತ್ರಿಯನ್ನೂ ಕಾಣಬಹುದು ಎಂದು ಲೇವಡಿ ಮಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರೌಡಿಗಳನ್ನು ಮಟ್ಟಹಾಕುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಈ ಆದೇಶಕ್ಕೂ ಮುನ್ನ ಅವರು ತಮ್ಮ ಹಿನ್ನೆಲೆಯನ್ನೊಮ್ಮೆ ನೋಡಿಕೊಳ್ಳಬೇಕಿತ್ತು ಎಂದು ಕುಟುಕಿದ ವಿಜಯೇಂದ್ರ ಅವರು, ಪ್ರಸ್ತುತ ಕಾಂಗ್ರೆಸ್ ಸರ್ಕಾರವನ್ನು ಮಟ್ಟಹಾಕುವ ಕೆಲಸ ರಾಜ್ಯದ ಜನತೆಯಿಂದ ಆಗಲಿದೆ ಎಂದರು.
ಕಾಂಗ್ರೆಸ್ ಸರಕಾರದಲ್ಲಿ ಸಚಿವ ಸ್ಥಾನ ಪಡೆಯಲು ಪೇಮೆಂಟ್ ಕೋಟ ಮತ್ತು ಮ್ಯಾನೇಜ್ಮೆಂಟ್ ಕೋಟ ಎಂಬ ವಿಂಗಡಣೆಯನ್ನು ಕಾಂಗ್ರೆಸ್ ಮಾಡಿದೆ. ಅದರಂತೆ ರಾಜ್ಯದಲ್ಲಿ ಸಚಿವರಾಗುತ್ತಿದ್ದಾರೆ ಎಂದ ಅವರು, ಈಗಾಗಲೇ ಅನೇಕ ಶಾಸಕರು ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಕಾಂಗ್ರೆಸ್ ಸರಕಾರದಿಂದ ರಾಜ್ಯ ಅಭಿವೃದ್ದಿ ಕಾಣಲು ಸಾಧ್ಯವಿಲ್ಲ ಎಂದರು.
ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಮಾತನಾಡಿ, ಜಿಲ್ಲೆಯಲ್ಲಿ ವನ್ಯಜೀವಿ ಮಾನವ ಸಂಘರ್ಷಸೇರಿದAತೆ ಅನೇಕ ಸಮಸ್ಯೆಗಳಿವೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರದ ವಿರುದ್ದ ವ್ಯವಸ್ಥಿತ ಹೋರಾಟಕ್ಕೆ ರೂಪುರೇಷೆ ಸಿದ್ದ ಪಡಿಸಲಾಗುತ್ತಿದೆ. ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಹೆಚ್ಚು ಸ್ಥಾನ ಪಡೆಯಲು ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಎಂಎಲ್ಸಿ ಸುಜಾ ಕುಶಾಲಪ್ಪ, ಪಕ್ಷದ ಪ್ರಮುಖರಾದ ಡಾ.ನವೀನ್ ಕುಮಾರ್, ಎಸ್.ಜಿ. ಮೇದಪ್ಪ, ಬಿ.ಬಿ. ಭಾರತೀಶ್, ರಾಬಿನ್ ದೇವಯ್ಯ, ರೀನಾ ಪ್ರಕಾಶ್, ವಿ.ಕೆ. ಲೋಕೇಶ್ ಸೇರಿದಂತೆ ಇತರರು ಇದ್ದರು.