ಶನಿವಾರಸಂತೆ, ಜೂ. ೧೭: ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದರ ಜೊತೆಗೆ ಅಲ್ಲಿನ ಮೂಲಸೌಕರ್ಯಗಳನ್ನು ಉತ್ತಮಪಡಿಸುವ ಪವಿತ್ರ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಸಮಿತಿ ಉಪಾಧ್ಯಕ್ಷ ರಾಜಶೇಖರ್ ಗೌಡ ಹೇಳಿದರು.

ಸಮೀಪದ ನಂದಿಗುAದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರವೇ ಸ್ವಾಭಿಮಾನಿ ಬಣದ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳನ್ನು ಸಂಘಟನೆಯ ಮೂಲಕ ತಲುಪಿಸುತ್ತಿರುವುದು ಹೆಮ್ಮೆಯ ಸಂಗತಿ. ಶಾಲಾ ಆವರಣವನ್ನು ಸ್ವಚ್ಛವಾಗಿ ನಿರ್ವಹಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಸೇವೆ ಶ್ಲಾಘನೀಯ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕುಶಾಲನಗರ ತಾಲೂಕು ಅಧ್ಯಕ್ಷ ಶಿವಣ್ಣ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮಾಜದ ಸಹಕಾರ ಅಗತ್ಯವಾಗಿದ್ದು, ಮಕ್ಕಳ ಶಿಕ್ಷಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ದಾನಿ ನಳಿನಿ ರಾಜಶೇಖರ್ ಅವರನ್ನು ಕರವೇ ಸ್ವಾಭಿಮಾನಿ ಬಣದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಾ, ಗೌರವಾಧ್ಯಕ್ಷ ಚಂದ್ರು, ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಮುರುಗೇಶ್, ಸಲಹೆಗಾರ ಸಜಿಲ್ ಕುಮಾರ್, ಕಾರ್ಮಿಕ ಘಟಕದ ಉಪಾಧ್ಯಕ್ಷ ಮಣಿಕಂಠ, ನೆಲ್ಲಿಹುದಿಕೇರಿ ಘಟಕದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ನಂದ ಹಾಗೂ ಕಾರ್ಯಕರ್ತರಾದ ಬಾಲಕೃಷ್ಣ, ನಂಜಪ್ಪ, ರಮೇಶ್, ಕಾರ್ತಿಕ್, ಶಾಲಾ ಮುಖ್ಯಶಿಕ್ಷಕಿ ವಸಂತಿ ಮತ್ತು ಶಿಕ್ಷಕಿ ಸಂಧ್ಯಾ ಉಪಸ್ಥಿತರಿದ್ದರು.