ಕೂಡಿಗೆ, ಜೂ. ೧೭: ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ, ಹೆಬ್ಬಾಲೆ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಐಇಸಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಹೆಬ್ಬಾಲೆ ಪದವಿ ಪೂರ್ವ ಕಾಲೇಜಿನಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಹಾಗೂ ನಶಾಮುಕ್ತ ಅಭಿಯಾನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮಾತನಾಡಿ, ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ಹೆಣ್ಣುಮಕ್ಕಳಲ್ಲಿ ಕ್ಯಾನ್ಸರ್ ತಡೆಗಟ್ಟಲು ನೀಡಲಾಗುವ ಹೆಚ್‌ಪಿವಿ ಲಸಿಕೆಯ ಮಹತ್ವ, ಜೂನ್ ೨೮ರಂದು ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ವಿಭಾಗದ ಮೇಲ್ವಿಚಾರಕಿ ಪುನೀತಾ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ವಿವರಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ದಂಡ ವಿಧಿಸುವ ನಿಯಮ ಹಾಗೂ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ-೨೦೦೩ ಕುರಿತು ಮಾಹಿತಿ ನೀಡಿದರು.
ಆರೋಗ್ಯ ನಿರೀಕ್ಷಕ ಸಂಜಯ್ ಮಲೇರಿಯಾ ಮತ್ತು ಡೆಂಗ್ಯೂ ರೋಗಗಳ ಲಕ್ಷಣಗಳು, ಸೊಳ್ಳೆಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಸೊಳ್ಳೆ ಉತ್ಪತ್ತಿ ತಾಣಗಳ ಸಮೀಕ್ಷೆ ನಡೆಸುತ್ತಿರುವ ಬಗ್ಗೆ ಹಾಗೂ ಸಾಂಕ್ರಾಮಿಕ ರೋಗಗಳ ತಡೆಗೆ ಸಾರ್ವಜನಿಕರ ಸಹಕಾರದ ಅಗತ್ಯವನ್ನು ತಿಳಿಸಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ ಮಾತನಾಡಿ, ನಶಾಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೈಜೋಡಿಸಬೇಕು ಹಾಗೂ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಸವರಾಜು, ಶಿಕ್ಷಕರಾದ ಭೋಜೇಗೌಡ ಮತ್ತು ಸತೀಶ್, ಆರೋಗ್ಯ ನಿರೀಕ್ಷಕ ಮುಕೇಶ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.