ವೀರಾಜಪೇಟೆ, ಜು. ೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ವೀರಾಜಪೇಟೆ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಮಾಯಮುಡಿ ವಲಯದ ಪೊನ್ನಪ್ಪಸಂತೆ ಕಾರ್ಯಕ್ಷೇತ್ರದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ಗ್ರಾಮ ಪಂಚಾಯಿತಿ ಸದಸ್ಯ ನಾಚಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ರತ್ನಮ್ಮ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದಲ್ಲಿ ಜನಪರ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದು, ಆರೋಗ್ಯ ತಪಾಸಣಾ ಶಿಬಿರಗಳು ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುತ್ತಿವೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಇಂತಹ ಶಿಬಿರಗಳ ಸದುಪಯೋಗ ಪಡೆಯಬೇಕು ಎಂದು ಕರೆ ನೀಡಿದರು.
ಒಕ್ಕೂಟದ ಅಧ್ಯಕ್ಷೆ ಶೀನಾ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲೇ ಆರೋಗ್ಯ ಸೇವೆ ದೊರೆಯುತ್ತಿರುವುದು ಸ್ಥಳೀಯರಿಗೆ ತುಂಬಾ ಅನುಕೂಲಕರವಾಗಿದೆ ಎಂದು ಹೇಳಿದರು.
ಮೈಸೂರಿನ ಐ ಆಸ್ಪತ್ರೆಯ ಹಿರಿಯ ಮಾರ್ಕೆಟಿಂಗ್ ವ್ಯವಸ್ಥಾಪಕ ಪಾಷಾ ಅವರು ಕಣ್ಣಿನ ಆರೋಗ್ಯ ಸಂರಕ್ಷಣೆ, ಕಣ್ಣಿನ ಸಮಸ್ಯೆಗಳು ಹಾಗೂ ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಸಂಸ್ಥೆಯ ‘ಸಂಪೂರ್ಣ ಸುರಕ್ಷಾ ಆರೋಗ್ಯ ರಕ್ಷಾ’ ಯೋಜನೆಯು ಸೌಲಭ್ಯಗಳ ಬಗ್ಗೆ ಜನಜಾಗೃತಿ ಮೂಡಿಸಿದರು.
ಶಿಬಿರದಲ್ಲಿ ಮೈಸೂರಿನ ವೀನಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮಾರ್ಕೆಟಿಂಗ್ ವ್ಯವಸ್ಥಾಪಕಿ ಡಾ. ಶ್ವೇತಾ ಹಾಗೂ ಬಸವರಾಜು ಅವರ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದೊತ್ತಡ ಹಾಗೂ ರಕ್ತದಲ್ಲಿನ ಸಕ್ಕರೆ ಪರೀಕ್ಷೆ ನಡೆಸಲಾಯಿತು.
ಸುಮಾರು ೧೫೦ಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡಿದ್ದು, ಅವರಲ್ಲಿ ೯೮ ಮಂದಿಗೆ ಕನ್ನಡಕಗಳನ್ನು ವಿತರಿಸಲಾಯಿತು. ಕಣ್ಣಿನ ಪೊರೆ ಸಮಸ್ಯೆ ಹೊಂದಿದ್ದವರಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ರಕ್ಷಾ ಹಾಗೂ ಆಯುಷ್ಮಾನ್ ಭಾರತ ಯೋಜನೆಯಡಿ ದೊರೆಯುವ ಉಚಿತ ಚಿಕಿತ್ಸಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಮುಂದಿನ ಚಿಕಿತ್ಸೆಗೆ ಮಾರ್ಗದರ್ಶನ ನೀಡಲಾಯಿತು.
ಕಾರ್ಯಕ್ರಮದಲ್ಲಿ ವಲಯದ ಕೃಷಿ ಮೇಲ್ವಿಚಾರಕ ವಸಂತ್, ಜ್ಞಾನವಿಕಾಸ ಸಮನ್ವಯಾಧಿಕಾರಿ, ಸೇವಾ ಪ್ರತಿನಿಧಿಗಳಾದ ಬಿಂದು, ಪುಷ್ಪಾ, ತಮನ್ನಾ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.