ಸಿದ್ದಾಪುರ, ಜು. ೪: ಮರದ ವ್ಯಾಪಾರಿಗಳು ಜಿಲ್ಲಾಧಿಕಾರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಟಿಂಬರ್ ವ್ಯಾಪಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲದ ಸಂದರ್ಭದಲ್ಲಿ ರಸ್ತೆ ಸುರಕ್ಷಿತ ಸಂಬAಧ ಹಾಗೂ ಭಾರೀ ವಾಹನಗಳ ಸಂಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದು ಈ ಹಿನ್ನೆಲೆಯಲ್ಲಿ ಮರಗಳನ್ನು ಸಾಗಾಟ ಮಾಡುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಆದೇಶವನ್ನು ಮೀರಿ ಸಾಗಾಟ ಮಾಡಿದ್ದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಮರ ವ್ಯಾಪಾರಿಗಳಿಗೆ ನಿರ್ದೇಶನ ನೀಡಿದರು.
ರಸ್ತೆ ಬದಿಯಲ್ಲಿ ಕಡಿದ ಮರಗಳನ್ನು ಲಾರಿಯಲ್ಲಿ ತುಂಬಿಸುವುದು ಹಾಗೂ ರಸ್ತೆ ಬದಿಯಲ್ಲಿ ವಾಹನಗಳಿಗೆ ತೆರಳಲು ಅಡಚಣೆ ಉಂಟುಮಾಡಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು. ಸಭೆಯಲ್ಲಿ ಸಿದ್ದಾಪುರ ಸುತ್ತಮುತ್ತಲಿನ ಮರ ವ್ಯಾಪಾರಿಗಳು ಹಾಜರಿದ್ದರು.