ಕುಶಾಲನಗರ, ಜು.೩: ಮಾಧ್ಯಮ ಸ್ಪಂದನ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೈರಸ್ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಕೊಡಗಿನ ಪತ್ರಕರ್ತರು ಮತ್ತು ಅವರ ಕುಟುಂಬಸ್ಥರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಸೈರಸ್ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು.
೩೦ಕ್ಕೂ ಹೆಚ್ಚು ಪತ್ರಕರ್ತರು ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ತಪಾಸಣೆಯ ಸೌಲಭ್ಯ ಪಡೆದುಕೊಂಡರು.
ಶಿಬಿರದಲ್ಲಿ ಹೃದ್ರೋಗ ತಜ್ಞರ ಸಲಹೆ, ರಕ್ತದಲ್ಲಿನ ಸಕ್ಕರೆ ಮಟ್ಟ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಇಸಿಜಿ, ಎಕೋ ಹಾಗೂ ಟ್ರೆಡ್‌ಮಿಲ್ ಪರೀಕ್ಷೆ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಯಿತು. ಮಾಧ್ಯಮ ಸ್ಪಂದನ ಸಂಸ್ಥಾಪಕ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿದರು.
ಸೈರಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮೂಳೆ ಶಸ್ತçಚಿಕಿತ್ಸಾ ತಜ್ಞ ಡಾ. ಟಿ.ಪಿ. ಜಿನಾಶ್ ಮಾತನಾಡಿ, ಪತ್ರಕರ್ತರು ಸಮಾಜದ ಅಮೂಲ್ಯ ಆಸ್ತಿ. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಉದ್ದೇಶದಿಂದ ಈ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಉಪಾಧ್ಯಕ್ಷ ವಾಸು ಆಚಾರ್ಯ, ನಿರ್ದೇಶಕರಾದ ಟಿ.ಆರ್. ಪ್ರಭುದೇವ್ ಹಾಗೂ ಆರ್. ಸುಬ್ರಮಣಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ, ಮಾಧ್ಯಮ ಸ್ಪಂದನ ರಕ್ತದಾನ ಶಿಬಿರದ ಸಂಚಾಲಕ ಕೆ.ಬಿ. ಷಂಶುದ್ದೀನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.