ಮಡಿಕೇರಿ, ಜು. ೫: ಕೊಡಗು ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿಯನ್ನು ಎದುರಿಸಲು ಸಜ್ಜಾಗುವಂತೆ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧ ಭಾನುವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಸದ್ಯ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಬೇಕು. ಜೊತೆಗೆ ‘ಎಲ್ ನಿನೊ’ ಪರಿಣಾಮದಿಂದ ಕಡಿಮೆ ಮಳೆಯಾದಲ್ಲಿ ಅನಾವೃಷ್ಟಿಯನ್ನೂ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳು ಯಾರನ್ನೂ ಕೇಳಿ ಬರುವುದಿಲ್ಲ. ಆದರೆ, ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ಅಗತ್ಯ ಸಹಕಾರ ನೀಡುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು. ಮುಂದಿನ ಮೂರು ತಿಂಗಳು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಸ್ಪಂದಿಸಬೇಕು. ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಧಿಕಾರಿಯವರ ಪಿ.ಡಿ. ಖಾತೆಯಲ್ಲಿ ೩.೦೫ ಕೋಟಿ ರೂಪಾಯಿ ಲಭ್ಯವಿದೆ. ಜೊತೆಗೆ ೫ ತಾಲೂಕುಗಳ ತಹಶೀಲ್ದಾರ್ಗಳ ಪಿ.ಡಿ. ಖಾತೆಯಲ್ಲಿ ಒಟ್ಟು ೧೪೧.೩೯ ಲಕ್ಷ ರೂಪಾಯಿ ಲಭ್ಯವಿದೆ. ಹಾಗಾಗಿ ಹಣದ ಕೊರತೆಯಿಲ್ಲ. ಸಮಸ್ಯೆಗಳು ಉಂಟಾದಲ್ಲಿ ಜನರಿಗೆ ಸ್ಪಂದಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ ಎಂದು ಸಚಿವರು ನುಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದAತೆ ಗಮನಹರಿಸಬೇಕು. ಒಡೆದಿರುವ ಪೈಪ್ಲೈನ್ಗಳನ್ನು ಸರಿಪಡಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಸಚಿವರು ಸೂಚಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಅವರು, ಸೋಮವಾರಪೇಟೆ ತಾಲೂಕಿನ ಗ್ರಾಮದಲ್ಲಿ ಪೈಪ್ಲೈನ್ ಒಡೆದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದನ್ನು ಸರಿಪಡಿಸುವಂತಾಗಬೇಕೆAದು ಹೇಳಿದರು.
ಸಚಿವರು ಮಾತನಾಡಿ, ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಗಮನಹರಿಸಬೇಕು. ಸರಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು. ಆ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಶಾಸಕರಾದ ಎ.ಎಸ್. ಪೊನ್ನಣ್ಣ ಮಾತನಾಡಿ, ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಬೇಕು. ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಬೇಕೆಂದು ಸಲಹೆ ನೀಡಿದರು.
ಸೆಸ್ಕ್ ಮತ್ತು ಕುಡಿಯುವ ನೀರು ವಿಭಾಗದ ಇಂಜಿನಿಯರ್ಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ತಾಕೀತು ಮಾಡಿದರು.
ಕುಡಿಯುವ ನೀರು ಪೂರೈಕೆ ಕಾಮಗಾರಿ ಸಂಬAಧ ಜಿ.ಪಂ. ಸಿಇಓ ಅವರು ಗಂಭೀರವಾಗಿ ಪರಿಗಣಿಸಿ ಪ್ರಗತಿ ಪರಿಶೀಲನೆ ನಡೆಸಬೇಕು. ಎಷ್ಟು ಬೋರ್ವೆಲ್ ಕೊರೆಯಲು ಬಾಕಿಯಿದೆ. ಎಷ್ಟು ಬೋರ್ವೆಲ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಾಗಿದೆ. ಮತ್ತಿತರ ಮಾಹಿತಿಯನ್ನು ಕೂಡಲೇ ಒದಗಿಸುವಂತೆ ಇಂಜಿನಿಯರ್ಗೆ ನಿರ್ದೇಶನ ನೀಡಿದರು.
ವಿಶೇಷ ಕಾರ್ಯಪಡೆಯಲ್ಲಿ ಹಣ ನೀಡುವುದು ಏಕೆ ಎಂದು ಪ್ರಶ್ನಿಸಿದ ಸಚಿವರು, ಅಧಿಕಾರಿಗಳು ಬುದ್ಧಿವಂತಿಕೆ ಜೊತೆಗೆ ಪ್ರಜ್ಞಾವಂತಿಕೆಯಿAದ ಸಾರ್ವಜನಿಕ ಕೆಲಸ ಮಾಡಬೇಕು ಎಂದು ಎಚ್ಚರಿಸಿದರು.
ಪ್ರಾಕೃತಿಕ ವಿಕೋಪ ಸಂದರ್ಭ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಎಚ್ಚರವಹಿಸಬೇಕು. ಮಳೆಗಾಲದಲ್ಲಿ ಹೆದ್ದಾರಿ ಬದಿ ಬೀಳಲಿರುವ ಮರವನ್ನು ಕಡಿಸುವಂತಾಗಬೇಕು. ಬೀಳುವ ಮರದ ಕೊಂಬೆಯನ್ನು ಕಡಿಯುವಂತಾಗಬೇಕು. ವಿದ್ಯುತ್ ಮಾರ್ಗಕ್ಕೆ ಮರದ ಕೊಂಬೆಗಳು ಬೀಳದಂತೆ ಕ್ರಮವಹಿಸಬೇಕೆಂದು ಸೂಚಿಸಿದರು.
ಗ್ರಾಮೀಣಾಭಿವೃದ್ಧಿ, ಸೆಸ್ಕ್ ಮತ್ತು ಅರಣ್ಯ ಮತ್ತಿತರ ಇಲಾಖೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕೃಷಿ, ತೋಟಗಾರಿಕೆ, ಕುಡಿಯುವ ನೀರು ಮತ್ತು ಸೆಸ್ಕ್ ವಿಭಾಗದ ಇಂಜಿನಿಯರ್ಗಳು ತಂಡವಾಗಿ ಕಾರ್ಯನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು.
ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಗುಂಡಿಬಿದ್ದ ರಸ್ತೆಗಳಿಗೆ ವೆಟ್ಮಿಕ್ಸ್ ಅಳವಡಿಸಬೇಕು. ದುರಂತಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು.
ಶಾಲೆ, ಅಂಗನವಾಡಿಗಳಲ್ಲಿ ಮಳೆಗಾಲದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಒತ್ತು ನೀಡಬೇಕು. ಶುದ್ಧ ಕುಡಿಯುವ ನೀರು ಮತ್ತು ಗುಣಮಟ್ಟದ ಆಹಾರ ಪೂರೈಸಬೇಕು. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಪ್ರಯೋಗಲಯದ ತಂತ್ರಜ್ಞರು ಇರಬೇಕು. ಡೆಂಗ್ಯೂ, ಮಲೇರಿಯಾ ಸೇರಿದಂತೆ ಇನ್ನಿತರ ರೋಗಗಳ ನಿಯಂತ್ರಣದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವಲ್ಲಿ ವೈದ್ಯಾಧಿಕಾರಿಗಳು ಗಮನಹರಿಸಬೇಕು. ತುರ್ತು ಸಂದರ್ಭಗಳಲ್ಲಿ ಸರಕಾರೇತರ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದು, ಮಾನವೀಯತೆಯಿಂದ ಕೆಲಸ ಮಾಡುವ ಸಂಸ್ಥೆಗಳಿಗೆ ಪ್ರಶಂಸನಾ ಪತ್ರವನ್ನು ಜಿಲ್ಲಾಡಳಿತದಿಂದ ನೀಡುವಂತಾಗಬೇಕು. ಪ್ರಾಕೃತಿಕ ವಿಕೋಪ ಸಂದರ್ಭ ಅನಾಹುತ ಸಂಭವಿಸಿದಲ್ಲಿ ಅಧಿಕಾರಿಗಳು ತಕ್ಷಣ ಭೇಟಿ ನೀಡಬೇಕು. ಜೊತೆಗೆ ನಿಯಮಾನುಸಾರ ಪರಿಹಾರ ನೀಡಬೇಕು. ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಂಕಷ್ಟದಲ್ಲಿರುವವರಿಗೆ ಆತ್ಮಸ್ಥೆöÊರ್ಯ ಮತ್ತು ಮಾನಸಿಕ ಸ್ಥೆöÊರ್ಯ ತುಂಬಬೇಕು. ಮುಂದಿನ ದಿನಗಳಲ್ಲಿ ವಿಭಾಗವಾರು ಪರಿಶೀಲನಾ ಸಭೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.
ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸೆಸ್ಕ್ ಸೇರಿದಂತೆ ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಹೇಳಿದರು.
ಜಿಲ್ಲಾಡಳಿತದ ವಾಟ್ಸಾö್ಯಪ್ ಸಂಖ್ಯೆ ೮೫೫೦೦೦೧೦೭೭, ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ೦೮೨೭೨ ೨೨೧೦೭೭, ಪೊಲೀಸ್ ಸಹಾಯವಾಣಿ ೧೧೨, ಸೆಸ್ಕ್ ೧೯೧ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು.
ನಗರಸಭಾ ಅಧ್ಯಕ್ಷೆ ಪಿ. ಕಲಾವತಿ ಅವರು ಮಾತನಾಡಿ, ಮಡಿಕೇರಿ ನಗರದಲ್ಲಿ ಪದೇ ಪದೇ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದನ್ನು ಸರಿಪಡಿಸಬೇಕೆಂದು ಕೋರಿದರು.
ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬೀಳುವ ಹಂತದಲ್ಲಿರುವ ಮರ ಹಾಗೂ ಮರದ ಕೊಂಬೆಯನ್ನು ತೆರವು ಮಾಡಲು ಅರಣ್ಯ ಇಲಾಖೆ ಸಹಕರಿಸುವಂತಾಗಬೇಕೆAದು ಹೇಳಿದರು.
ಈ ಸಂದರ್ಭ ಮಾತನಾಡಿದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗಕ್ಕೆ ಸರಕಾರದಿಂದ ಬಿಡುಗಡೆ ಮಾಡಿರುವ ಹಣವನ್ನು ಸಮರ್ಪಕವಾಗಿ ಖರ್ಚು ಮಾಡಬೇಕು. ಜೊತೆಗೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಮಡಿಕೇರಿ ಶಾಸಕರಾದ ಮಂತರ್ ಗೌಡ ಮಾತನಾಡಿ, ಮಡಿಕೇರಿ ನಗರದಲ್ಲಿ ಯುಜಿ ಕೇಬಲ್ ಅಳವಡಿಸಲು ಅನುಮೋದನೆ ದೊರೆತಿದೆ. ಮಳೆಗಾಲ ನಂತರ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ಕಳೆದ ಬಾರಿಗೆ ಹೋಲಿಸಿದರೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಮಾತನಾಡಿ, ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ೪ ತಂಡಗಳಿದ್ದು, ಜೊತೆಗೆ ಎನ್ಡಿಆರ್ಎಫ್ನ ೧ ತಂಡವಿದೆ. ಹೋಂ ಗಾರ್ಡ್ಸ್ ತಂಡವೂ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಮುಂಗಾರು ಸಂದರ್ಭ ಭತ್ತ ಮತ್ತು ಮುಸುಕಿನ ಜೋಳ ಬೆಳೆಯಲಾಗುತ್ತದೆ. ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಈ ಬಾರಿ ಮಳೆ ಪ್ರಮಾಣ ಕಡಿಮೆಯಿದ್ದರೂ ಸಹ ಮರದ ಕೊಂಬೆಗಳು ಹಾಗೂ ಮರಗಳು ಬೀಳುತ್ತಿದ್ದು, ಇದನ್ನು ತೆರವು ಮಾಡಲು ಕ್ರಮವಹಿಸುವಂತೆ ಸೂಚಿಸಿದರು.
ಉಪಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಮಾತನಾಡಿ, ಅಗತ್ಯವಿರುವ ಕಡೆಗಳಲ್ಲಿ ಮರದ ಕೊಂಬೆ ತೆರವು ಮಾಡಲು ಅನುಮತಿ ನೀಡಲಾಗುತ್ತಿದೆ ಎಂದು ಹೇಳಿದರು.
ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಕುಡಿಯುವ ನೀರು ಪೂರೈಕೆ ಹಾಗೂ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಲಾಗಿದೆ ಎಂದರು.
ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಹನಾ ಹಾದಿಮನಿ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು, ಇಂಜಿನಿಯರ್ಗಳು, ತಹಶೀಲ್ದಾರ್ಗಳು ಇದ್ದರು.