ಪೊನ್ನಂಪೇಟೆ, ಜು. ೮: ಪೊನ್ನಂಪೇಟೆಯ ಕೊಡವ ಎಜುಕೇಷನ್ ಸೊಸೈಟಿಯ ಅಧೀನದಲ್ಲಿರುವ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಓರಿಯಂಟೇಷನ್ ಹಾಗೂ ಪ್ರತಿಭಾನ್ವೇಷಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಷ್ಟ್ರಮಟ್ಟದ ‘ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಪುರಸ್ಕೃತೆ ಶಿಲ್ಪ ನಂಜಪ್ಪ ಮಾತನಾಡಿ, ಪ್ರತಿಯೊಂದು ಕಲೆಯೂ ಜೀವನದಲ್ಲಿ ಶಿಸ್ತು, ಏಕಾಗ್ರತೆ ಮತ್ತು ಜ್ಞಾನದ ಬೆಳವಣಿಗೆಗೆ ಸಹಕಾರಿಯಾಗಿದೆ. ಭರತನಾಟ್ಯದ ತಾಳ, ಲಯ ಹಾಗೂ ವಿವಿಧ ಭಂಗಿಗಳು ಏಕಾಗ್ರತೆಯನ್ನು ವೃದ್ಧಿಸುವುದರ ಜೊತೆಗೆ ಗಣಿತ, ವಿಜ್ಞಾನ, ಭೂಗೋಳ ಮತ್ತು ಜೀವಶಾಸ್ತ್ರದಂತಹ ವಿಷಯಗಳ ಅರಿವಿಗೂ ನೆರವಾಗುತ್ತವೆ ಎಂದರು. ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ನಿರಂತರ ಪರಿಶ್ರಮದ ಮೂಲಕ ಯಶಸ್ಸು ಸಾಧಿಸಬೇಕು ಎಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವುದು ಶಿಕ್ಷಕರು ಹಾಗೂ ಪೋಷಕರ ಜವಾಬ್ದಾರಿಯಾಗಿದೆ. ಶೈಕ್ಷಣಿಕ ಸಾಧನೆಯೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ವಿದ್ಯಾರ್ಥಿಗಳು ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಎಂದರು ಹೇಳಿದರು.

ಕೊಡವ ಎಜುಕೇಷನ್ ಸೊಸೈಟಿ ಜಂಟಿ ಕಾರ್ಯದರ್ಶಿ ರಾಜ ನಂಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನ ಹರಿಸಿ ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರಗಳನ್ನು ರೂಢಿಸಿಕೊಳ್ಳುವ ಮೂಲಕ ದೇಶಕ್ಕೆ ಆದರ್ಶ ಪ್ರಜೆಗಳಾಗಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕೊಡವ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ ಮಾತನಾಡಿ, ತಂತ್ರಜ್ಞಾನ ಮತ್ತು ಸಂಶೋಧನೆಯ ಯುಗದಲ್ಲಿ ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಪೋಷಕರು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೬೦೦ಕ್ಕೆ ೫೯೬ ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಭಾಷಿತ ಕೆ.ಡಿ. ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ವಿಜ್ಞಾನ ವಿಭಾಗದ ಸಂಜನಾ ಭಗತ್, ಲೋಚನ್ ಎಂ.ಎಸ್. ಹಾಗೂ ವಾಣಿಜ್ಯ ವಿಭಾಗದ ರಿಶ್ವಿ ಗೌರಮ್ಮ ಕೆ.ಬಿ, ರಿಶಿರಾ ಮೊಣ್ಣಪ್ಪ ಎ. ಸೇರಿದಂತೆ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ವಿಷಯವಾರು ಶೇ.೧೦೦ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೊಡವ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಎಂ.ಎA. ತಿಮ್ಮಯ್ಯ, ಖಜಾಂಚಿ ಜಾಜಿ ಉತ್ತಪ್ಪ, ಸಿಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಬಸವರಾಜ್ ಸೇರಿದಂತೆ ಸೊಸೈಟಿಯ ಪದಾಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.