ಶನಿವಾರಸAತೆ, ಜು. ೮: ಸರ್ಕಾರಿ ಶಾಲೆಗಳು ಸಂಪದ್ಭರಿತ ಸಂಪನ್ಮೂಲ ಕೇಂದ್ರಗಳಾಗಿದ್ದು, ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುತ್ತಾರೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಸಮಾಜಸೇವಕ ಹರಪಳ್ಳಿ ರವೀಂದ್ರ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ೨೬೦ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳ ಶಿಕ್ಷಕರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರದ್ಧೆಯಿಂದ ಶ್ರಮಿಸುತ್ತಿದ್ದಾರೆ. ಬಡತನದ ಕಾರಣದಿಂದ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರುಗಳನ್ನು ಆದರ್ಶವಾಗಿಟ್ಟುಕೊಂಡು ಗುರಿಯತ್ತ ಸಾಗಬೇಕು. ಮುಂದೆ ಗುರಿ, ಹಿಂದೆ ಗುರು ಇದ್ದರೆ ಯಶಸ್ಸು ಖಚಿತ ಎಂದು ಹೇಳಿದ ಅವರು, ಉತ್ತಮ ವಿದ್ಯಾರ್ಥಿಯಾಗಲು ಜ್ಞಾನ ಸಂಪಾದನೆ ಅತ್ಯಗತ್ಯ. ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಕೆಪಿಟಿಸಿಎಲ್ ಎಂಜಿನಿಯರ್ ಪ್ರಸಾದ್ ಮಾತನಾಡಿ, ಸಮಾಜದಲ್ಲಿ ಸಾಧನೆಯೊಂದಿಗೆ ದಾನ ಮಾಡುವ ಮನೋಭಾವವೂ ಬೆಳೆಸಿಕೊಳ್ಳಬೇಕು ಎಂದರು.

ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿ ಪೋಷಕರ ಬಡತನದ ಭಾವನೆ ಮೂಡದಂತೆ ನೋಡಿಕೊಳ್ಳಬೇಕು. ಸರ್ಕಾರಿ ಶಾಲೆ ಎಂಬ ಕೀಳರಿಮೆಯನ್ನು ತೊರೆದು ಪರಿಶ್ರಮ, ಶಿಸ್ತು ಹಾಗೂ ಧನಾತ್ಮಕ ಚಿಂತನೆಯೊAದಿಗೆ ಶಿಕ್ಷಣದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದ ವತಿಯಿಂದ ಹರಪಳ್ಳಿ ರವೀಂದ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಒಕ್ಕಲಿಗರ ಸಂಘದ ತಾಲೂಕು ಯುವ ವೇದಿಕೆ ಅಧ್ಯಕ್ಷ ಸುರೇಶ್ ಚಕ್ರವರ್ತಿ, ಉಪಾಧ್ಯಕ್ಷ ಪೃಥ್ವಿ, ನಿರ್ದೇಶಕ ಎಂ.ಜೆ. ವಿನೋದ್, ಶನಿವಾರಸಂತೆ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಹರೀಶ್, ಸಂಘದ ಸದಸ್ಯರಾದ ಕಾಟ್ಲಮನೆ ಗಿರೀಶ್, ಪುನೀತ್ ತಾಳೂರು, ಬಿ.ಪಿ. ಪ್ರಣೀತ್, ಭರತ್, ಪ್ರಸಾದ್, ಸ್ವಾಮಿ, ಶಾಲಾ ಮುಖ್ಯಶಿಕ್ಷಕಿ ಲಲಿತಾ, ದೈಹಿಕ ಶಿಕ್ಷಣ ಶಿಕ್ಷಕಿ ಜಿ.ಪಿ. ಕವಿತಾ ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚರಣ್ ಉಪಸ್ಥಿತರಿದ್ದರು. ಶಿಕ್ಷಕಿ ರಜಿಯಾ ಪ್ರಾರ್ಥಿಸಿದರು. ಮುಖ್ಯಶಿಕ್ಷಕಿ ಲಲಿತಾ ಸ್ವಾಗತಿಸಿದರು. ಸಿ.ಕೆ. ದಿನೇಶ್ ವಂದಿಸಿದರು. ಶಿಕ್ಷಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು.