ವೀರಾಜಪೇಟೆ, ಜು. ೯: ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರ ನೇಮಕವಾಗದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೊಡಗಿನ ವಿವಿಧ ತಾಲೂಕುಗಳ ಜೆಡಿಎಸ್ ಅಧ್ಯಕ್ಷರ ನಿಯೋಗವು ಜೆಡಿಎಸ್ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಬೆಂಗಳೂರಿನ ಜೆಪಿ ಭವನದಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಅವರನ್ನು ಭೇಟಿ ಮಾಡಿ ಶೀಘ್ರದಲ್ಲೇ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡುವಂತೆ ಮನವಿ ಸಲ್ಲಿಸಿದರು.

ನಿಯೋಗದ ಮನವಿಗೆ ಸ್ಪಂದಿಸಿದ ಕುಮಾರಸ್ವಾಮಿ, ಕೂಡಲೇ ಪಕ್ಷದ ರಾಜ್ಯ ಮುಖಂಡ ಹಾಗೂ ಮಾಜಿ ಉಸ್ತುವಾರಿ ಸಚಿವ ಸಾ.ರ. ಮಹೇಶ್ ಅವರಿಗೆ ದೂರವಾಣಿ ಕರೆ ಮಾಡಿ ಕೊಡಗು ಜಿಲ್ಲಾ ಘಟಕದ ವಿಚಾರವಾಗಿ ತುರ್ತು ಸಭೆ ನಡೆಸುವಂತೆ ಸೂಚಿಸಿದರು.

ಅದರಂತೆ ತಾ. ೧೦ ರಂದು ಮಧ್ಯಾಹ್ನ ೧೨.೩೦ಕ್ಕೆ ಪಕ್ಷದ ಪ್ರಮುಖ ಮುಖಂಡರ ಸಭೆ ನಡೆಯಲಿದ್ದು, ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರ ನೇಮಕ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಕೊಡಗು ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಜಿಲ್ಲಾಧ್ಯಕ್ಷರ ಹುದ್ದೆ ಖಾಲಿ ಇರುವುದರಿಂದ ಪಕ್ಷದ ಸಂಘಟನೆಗೆ ಹಿನ್ನಡೆಯಾಗಿದ್ದು, ಶೀಘ್ರ ನೇಮಕ ಮಾಡುವಂತೆ ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ.

ನಿಯೋಗದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಿ.ಎಲ್. ವಿಶ್ವ, ವೀರಾಜಪೇಟೆ ತಾಲೂಕು ಅಧ್ಯಕ್ಷ ಪಿ.ಎ. ಮಂಜುನಾಥ್, ಮಡಿಕೇರಿ ತಾಲೂಕು ಅಧ್ಯಕ್ಷ ರವಿ ಕಿರಣ್ ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಕೆ. ಶಿವದಾಸ್ ಹಾಗೂ ಕುಶಾಲನಗರ ತಾಲೂಕು ಅಧ್ಯಕ್ಷ ಕೋಟಿ ರಾಮಣ್ಣ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು.