ಹೆಬ್ಬಾಲೆ, ಜು. ೯: ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ವಿಜ್ಞಾನಿ ಡಾ. ಡಾರ್ವಿನ್ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಅವರಿಗೆ ಅಭಿನಂದನೆ, ಬೀಳ್ಕೊಡುಗೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಾಲಾ ಆವರಣದಲ್ಲಿ ಗಿಡ ನೆಟ್ಟು ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ನೆಲ, ಜಲ, ಅರಣ್ಯ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಟಿ.ಜಿ. ಪ್ರೇಮಕುಮಾರ್ ಹಾಗೂ ಅವರ ಪತ್ನಿಯನ್ನು ಅಭಿನಂದಿಸಿದ ಶಾಸಕರು, ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಪ್ರೇಮಕುಮಾರ್ ಅವರು ಪಾಠದ ಜತೆಗೆ ಪರಿಸರ ಮತ್ತು ವಿಜ್ಞಾನ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ ಎಂದು ಶ್ಲಾಘಿಸಿದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರೇಮಕುಮಾರ್ ಅವರು ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸ್ನೇಹಿತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು ಎಂದು ಹೇಳಿದರು. ಮಾಜಿ ಸಚಿವ ಎಂ.ಪಿ. ಅಪ್ಪಚ್ಚುರಂಜನ್ ಪರಿಸರ ಸಂರಕ್ಷಣೆಯ ಜಾಗೃತಿ ಆಂದೋಲನದ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಜಾಗತಿಕ ತಾಪಮಾನ ನಿಯಂತ್ರಣ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಜೀವನ ಕಲ್ಪಿಸಲು ಪರಿಸರ ರಕ್ಷಣೆ ಅಗತ್ಯವಾಗಿದೆ ಎಂದರು.

ಅಭಿನAದನೆ ಸ್ವೀಕರಿಸಿ ಮಾತನಾಡಿದ ಟಿ.ಜಿ. ಪ್ರೇಮಕುಮಾರ್, ನಿವೃತ್ತಿಯ ನಂತರವೂ ಜನರು ನೆನಪಿಸಿಕೊಳ್ಳುವುದು ಶಿಕ್ಷಣ ನೀಡಿದ ಗುರುಗಳನ್ನು ಮಾತ್ರ. ತಮಗೆ ದೊರೆತ ಶಿಕ್ಷಕ ವೃತ್ತಿಯ ಅವಕಾಶವನ್ನು ನಿಷ್ಠೆಯಿಂದ ಬಳಸಿಕೊಂಡು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ತೃಪ್ತಿ ಇದೆ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆ ಎಲ್ಲರ ಹೊಣೆಗಾರಿಕೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿಮ್ಯಾಥ್ಯೂ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್, ಕೂಡಿಗೆ ಡಯಟ್ ಪ್ರಾಂಶುಪಾಲ ರಾಮಚಂದ್ರ ರಾಜೇಅರಸ್, ಸಾಹಿತಿ ಡಾ. ಜೆ. ಸೋಮಣ್ಣ ಸೇರಿದಂತೆ ಹಲವರು ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ಹೇಮಾವತಿ ಅಧ್ಯಕ್ಷತೆ ವಹಿಸಿದ್ದರು. ರಂಗಭೂಮಿ ಕಲಾವಿದ ಭರಮಣ್ಣ ಬಿ. ಬೆಟಗೇರಿ ಹಾಗೂ ವಿದ್ಯಾರ್ಥಿಗಳು ಪರಿಸರ ಗೀತೆಗಳನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಕುಶಾಲನಗರ ಕೈಗಾರಿಕೋದ್ಯಮಿಗಳ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್. ಶರವಣಕುಮಾರ್, ಪ್ರಮುಖರಾದ ಇ.ಸುಲೇಮಾನ್, ಮೆ.ನಾ. ವೆಂಕಟನಾಯಕ್, ಟಿ.ಬಿ. ಮಂಜುನಾಥ್, ಕೆ.ವಿ. ಉಮೇಶ್, ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎನ್. ಪವನ್ ಕುಮಾರ್, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ, ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಎಚ್.ಜೆ. ನಾಗರಾಜ್, ಜಿಲ್ಲಾ ಪಿಯು ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ನಾಗಪ್ಪ ಯಾಲಕ್ಕಿಕಟ್ಟೆ, ಮಾಜಿ ಅಧ್ಯಕ್ಷ ಫಿಲಿಪ್ ವಾಸ್ ಮತ್ತಿತರರು ಭಾಗವಹಿಸಿದ್ದರು.