ಮಡಿಕೇರಿ, ಜು. ೧೭: ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆ, ಅಕ್ರಮ ಪಾರ್ಕಿಂಗ್ ಮತ್ತು ಹೆಲ್ಮೆಟ್ ಧರಿಸದ ವಾಹನ ಸವಾರರ ವಿರುದ್ಧ ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.
ಆಟೋ, ಟ್ಯಾಕ್ಸಿ, ಜೀಪ್ ಹಾಗೂ ಆ್ಯಂಬುಲೆನ್ಸ್ ಚಾಲಕರು ಮತ್ತು ಮಾಲೀಕರೊಂದಿಗೆ ಸಭೆ ನಡೆಸಿದ ಪೊಲೀಸರು, ಸಂಚಾರ ಸುರಕ್ಷತೆ ಕುರಿತು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.
ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ನಗರದ ಮೈತ್ರಿ ಸಭಾಂಗಣದಲ್ಲಿ ಇತ್ತೀಚೆಗೆ ಸಂಚಾರ ಸುರಕ್ಷತೆ ಕುರಿತ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭೆಯ ಆರಂಭದಲ್ಲಿ ಮಾತನಾಡಿದ ಸಂಚಾರಿ ಠಾಣೆಯ ಪಿಎಸ್‌ಐ ಶ್ರೀಧರ್, ನಗರದಲ್ಲಿ ವಾಹನಗಳನ್ನು ಬೇಕಾಬಿಟ್ಟಿಯಾಗಿ ರಸ್ತೆ ಬದಿಯಲ್ಲಿ ನಿಲ್ಲಿಸುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಇದ್ದರೂ ನಿಯಮ ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದರು.
ಹೆಲ್ಮೆಟ್ ಧರಿಸದೆ ಬಾಡಿಗೆ ಬೈಕ್ ಚಲಾಯಿಸುವುದು ಹಾಗೂ ಮೂವರು ಸವಾರಿ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಪೊಲೀಸರಿಗೆ ಹೆದರಿ ಹೆಲ್ಮೆಟ್ ಧರಿಸಬೇಡಿ, ನಿಮ್ಮ ಜೀವ ಉಳಿಸಿಕೊಳ್ಳಲು ಹೆಲ್ಮೆಟ್ ಧರಿಸಿ ಎಂದು ಸಲಹೆ ನೀಡಿದರು.
ಶಾಲಾ ವ್ಯಾಪ್ತಿಯಲ್ಲಿ ವಾಹನಗಳನ್ನು ಎಚ್ಚರಿಕೆಯಿಂದ ಚಲಾಯಿಸಬೇಕು. ಆಟೋಗಳಲ್ಲಿ ನಿಗದಿತ ಸಂಖ್ಯೆಗಿAತ ಹೆಚ್ಚು ಮಕ್ಕಳನ್ನು ಕರೆದೊಯ್ಯಬಾರದು ಹಾಗೂ ಮಕ್ಕಳನ್ನು ಚಾಲಕನ ಪಕ್ಕ ಕೂರಿಸಿಕೊಂಡು ಹೋಗಬಾರದು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.
ಮಾಂದಲಪಟ್ಟಿಗೆ ತೆರಳುವ ಬಾಡಿಗೆ ಜೀಪುಗಳನ್ನು ನಗರದ ಮುಖ್ಯ ರಸ್ತೆಗಳ ಬದಿಯಲ್ಲಿ ನಿಲ್ಲಿಸುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ರಸ್ತೆ ಬದಿ ಪಾರ್ಕಿಂಗ್ ತಪ್ಪಿಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಇನ್ನು ಮುಂದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್‌ಐ ಶ್ರೀಧರ್ ಎಚ್ಚರಿಕೆ ನೀಡಿದರು. ಪ್ರಾದೇಶಿಕ ಸಾರಿಗೆ ಇಲಾಖೆಯ ಇನ್‌ಸ್ಪೆಕ್ಟರ್ ಮೋಹನ್ ಕುಮಾರ್, ಚಾಲಕರಿಗೆ ಸಂಚಾರ ಸುರಕ್ಷತೆ ಕುರಿತು ಅರಿವು ಮೂಡಿಸಿದರು. ಅಪಘಾತಗಳು ಅನಿರೀಕ್ಷಿತವಾಗಿ ಸಂಭವಿಸಿದರೂ, ಬಹುತೇಕ ಅಪಘಾತಗಳಿಗೆ ಚಾಲಕರ ನಿರ್ಲಕ್ಷö್ಯವೇ ಪ್ರಮುಖ ಕಾರಣವಾಗಿದೆ ಎಂದರು.
ಸಭೆಯಲ್ಲಿ ಮಾಂದಲಪಟ್ಟಿ ಜೀಪು ಚಾಲಕರ ಸಂಘದ ಅಧ್ಯಕ್ಷ ಉಣ್ಣಿಕೃಷ್ಣ ಮಾತನಾಡಿ, ಕುಶಾಲನಗರದಿಂದ ಮೈಸೂರು - ಬೆಂಗಳೂರು ಸಂಪರ್ಕ ರಸ್ತೆಗಳ ಅಭಿವೃದ್ಧಿಯಿಂದ ವಾಹನಗಳ ಸಂಚಾರ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಕುಶಾಲನಗರ ಬಳಿಯ ಆನೆಕಾಡಿನಿಂದ ಮಡಿಕೇರಿಯ ಸುದರ್ಶನ ವೃತ್ತದವರೆಗೆ ವಾಹನ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ಈ ರಸ್ತೆಯನ್ನು ಅಗಲೀಕರಣಗೊಳಿಸುವಂತೆ ಮನವಿ ಮಾಡಿದರು. ಈ ಕುರಿತು ಪ್ರತಿಕ್ರಿಯಿಸಿದ ಡಿವೈಎಸ್‌ಪಿ ಸೂರಜ್ ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತರುವುದಾಗಿ ಭರವಸೆ ನೀಡಿದರು.
ಜನರಲ್ ತಿಮ್ಮಯ್ಯ ವೃತ್ತದ ಬಳಿ ಅನೇಕರು ಬೆಳಗ್ಗೆಯೇ ವಾಹನಗಳನ್ನು ನಿಲ್ಲಿಸಿ ದಿನವಿಡೀ ಅಲ್ಲಿಯೇ ಬಿಟ್ಟು ಹೋಗುತ್ತಿರುವುದರಿಂದ, ನಿತ್ಯ ಕೆಲಸ ಕಾರ್ಯಗಳಿಗೆ ಬರುವವರಿಗೆ ಪಾರ್ಕಿಂಗ್ ಸಮಸ್ಯೆ ಎದುರಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದರು. ಇದಲ್ಲದೆ ಕರ್ತವ್ಯದ ವೇಳೆ ಕೆಲ ಸಂಚಾರಿ ಪೊಲೀಸ್ ಸಿಬ್ಬಂದಿ ಮೊಬೈಲ್ ಬಳಕೆಯಲ್ಲಿ ತೊಡಗಿರುವುದು ಕಂಡುಬರುತ್ತಿದೆ ಎಂಬ ದೂರನ್ನೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.
ರಸ್ತೆಯ ಪಾದಚಾರಿ ಮಾರ್ಗ ಕುಸಿದಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ತೆರಳುವ ರಸ್ತೆಯನ್ನು ಬಂದ್ ಮಾಡಲಾಗಿದೆ. ಇದರಿಂದ ವಾಹನ ಸವಾರರು ಸುತ್ತುಬಳಸಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಆಟೋ ಮಾಲೀಕರು ಮತ್ತು ಚಾಲಕರ ಸಂಘದ ಜಿಲ್ಲಾಧ್ಯಕ್ಷ ಮೇದಪ್ಪ ಮನವಿ ಮಾಡಿದರು.
ಸಂಚಾರಿ ನಿಯಮಗಳ ಪಾಲನೆಯ ಮಹತ್ವ, ರಸ್ತೆ ಸುರಕ್ಷತೆ ಹಾಗೂ ವಾಹನ ಚಾಲಕರು ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಗಳ ಕುರಿತು ಮಡಿಕೇರಿ ಡಿವೈಎಸ್ಪಿ ಸೂರಜ್ ಹಾಗೂ ಮಡಿಕೇರಿ ಗ್ರಾಮಾಂತರ ಠಾಣೆಯ ಸಿಐ ಚಂದ್ರಶೇಖರ್ ಅಗತ್ಯ ಮಾಹಿತಿ ಹಾಗೂ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ಮಹಿಳಾ ಠಾಣೆಯ ವೃತ್ತ ನಿರೀಕ್ಷಕ ಉಮೇಶ್ ಉಪಸ್ಥಿತರಿದ್ದರು.