ಕಡಂಗ, ಜು. ೧೭: ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಡಂಗ ಪಟ್ಟಣದಲ್ಲಿ ಹೆಲ್ಮೆಟ್ ಧರಿಸುವಂತೆ ಜಾಗೃತಿ ಕಾರ್ಯಕ್ರಮ ನಡೆಸಿ, ದ್ವಿಚಕ್ರ ವಾಹನ ಸವಾರರಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭ ಮಾತನಾಡಿದ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ವಾಣಿ ಶ್ರೀ, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ತಮ್ಮ ಜೀವ ರಕ್ಷಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಹೆಲ್ಮೆಟ್ ಧರಿಸುವುದರಿಂದ ಅಪಘಾತದ ಸಂದರ್ಭದಲ್ಲಿ ತಲೆಗೆ ಆಗುವ ಗಂಭೀರ ಗಾಯಗಳನ್ನು ತಡೆಯಬಹುದಾಗಿದ್ದು, ಸಾವಿನ ಸಾಧ್ಯತೆಯನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಹೆಲ್ಮೆಟ್ ಇಲ್ಲದೆ ವಾಹನ ಚಾಲನೆ ಮಾಡುವವರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕರ್ನಾಟಕ ರಕ್ಷಣಾ ವೇದಿಕೆಯ ಮಹಾಸಭೆ
ಸೋಮವಾರಪೇಟೆ, ಜು. ೧೭: ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ತಾಲೂಕು ಘಟಕದ ವಾರ್ಷಿಕ ಮಹಾಸಭೆ ಅಧ್ಯಕ್ಷ ಸಂತೋಷ್ ಅಧ್ಯಕ್ಷತೆಯಲ್ಲಿ ಸ್ಥಳೀಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಅಧ್ಯಕ್ಷ ಸಂತೋಷ್ ಮಾತನಾಡಿ, ನಾಡು ನುಡಿಯ ಸೇವೆ ಮಾಡುತ್ತಿರುವ ರಕ್ಷಣಾ ವೇದಿಕೆ, ಇನ್ನಷ್ಟು ಸೇವಾ ಕಾರ್ಯಗಳನ್ನು ಕೈಗೊಳ್ಳಬೇಕಿದೆ. ಇದರೊಂದಿಗೆ ಸಂಘಟನೆಯನ್ನೂ ಬಲಪಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕಿಕ್ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಪದಕ ಪಡೆದಿರುವ ಸೋಮವಾರಪೇಟೆ ಜಿ.ಎಂ.ಪಿ. ಶಾಲಾ ವಿದ್ಯಾರ್ಥಿಗಳಾದ ಮಿತೇಶ್ ಹಾಗೂ ರಿತನ್ ಅವರುಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಪಿ. ರಾಜು, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಕುದುಪಜೆ, ಸಂಚಾಲಕ ಗೋವಿಂದ, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ, ಸೋಮವಾರಪೇಟೆ ಮಹಿಳಾ ಘಟಕದ ಅಧ್ಯಕ್ಷೆ ಆಶಾ ಸೇರಿದಂತೆ ಇತರರು ಇದ್ದರು.