ಶನಿವಾರಸಂತೆ, ಜು. ೧೭: ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಶನಿವಾರಸಂತೆ ಪೊಲೀಸ್ ಠಾಣೆ ವೃತ್ತನಿರೀಕ್ಷಕ ಜಿ. ಕೃಷ್ಣರಾಜ್ ಕರೆ ನೀಡಿದರು.

ಪಟ್ಟಣದ ಸೇಕ್ರೆಡ್ ಹಾರ್ಟ್ ಆಂಗ್ಲ ಮಾದ್ಯಮ ವಿದ್ಯಾಸಂಸ್ಥೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಹಾಗೂ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ನಾಗರಿಕರಾಗಬೇಕು ಎಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆವರೆಂಡ್ ಫಾದರ್ ಜಿ.ಬಿ. ಥೋಮಸ್ ಮಾತನಾಡಿ, ವಿದ್ಯಾರ್ಥಿ ನಾಯಕತ್ವವು ಜವಾಬ್ದಾರಿ, ಸೇವಾ ಮನೋಭಾವ ಹಾಗೂ ಶಿಸ್ತಿನ ಪ್ರತೀಕವಾಗಿದ್ದು; ಆಯ್ಕೆಯಾದ ನಾಯಕರು ತಮ್ಮ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದರು. ವಿದ್ಯಾರ್ಥಿ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ನಾಯಕರು ಪ್ರತಿಜ್ಞಾವಿಧಿ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ನಂತರ ವಿದ್ಯಾರ್ಥಿಗಳು ನೃತ್ಯ, ಮೂಕಾಭಿನಯ, ಫ್ಯಾಷನ್ ಪೆರೇಡ್, ಛದ್ಮವೇಷ, ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಮನರಂಜಿಸಿದರು. ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಫಾದರ್ ಶಿಬಿನ್ ಮ್ಯಾಥ್ಯಾ, ಫಾದರ್ ಜೇಮ್ಸ್, ಶಿಕ್ಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.