ಗೋಣಿಕೊಪ್ಪಲು, ಜು. ೧೮: ಪೊಲೀಸರ ಭಯದಿಂದಲ್ಲ, ತಮ್ಮ ಅಮೂಲ್ಯ ಜೀವದ ರಕ್ಷಣೆಗಾಗಿ ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಗುಣಮಟ್ಟದ ಹೆಲ್ಮೆಟ್ ಧರಿಸಬೇಕು ಎಂದು ವೀರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್ ಕರೆ ನೀಡಿದರು.

ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಬೈಕ್ ಹಾಗೂ ಸ್ಕೂಟರ್ ಖರೀದಿಸುವ ಅನೇಕರು ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಲು ಹಿಂದೇಟು ಹಾಕುತ್ತಿರುವುದು ವಿಷಾದನೀಯ ಎಂದರು.

ಅಪಘಾತ ಸಂಭವಿಸಿದಾಗ ಅದರ ನೋವು ಕುಟುಂಬದವರಿಗೇ ಹೆಚ್ಚು. ಹೆಲ್ಮೆಟ್ ಧರಿಸುವುದರಿಂದ ತಲೆಗೆ ಗಂಭೀರ ಗಾಯವಾಗುವ ಸಾಧ್ಯತೆ ಕಡಿಮೆಯಾಗುತ್ತದೆ ಹಾಗೂ ಜೀವ ಉಳಿಯುವ ಸಾಧ್ಯತೆ ಹೆಚ್ಚುತ್ತದೆ. ವಾಹನ ಕಾಯ್ದೆಯಡಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ದಂಡ ವಿಧಿಸುವುದು ಕೇವಲ ಶಿಕ್ಷೆ ನೀಡುವುದಕ್ಕಲ್ಲ, ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಎಂದು ತಿಳಿಸಿದರು.

ಗೋಣಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಾಳೇಗೌಡ ಮಾತನಾಡಿ, ನಗರದಲ್ಲಿ ಪ್ರತಿಯೊಬ್ಬ ವಾಹನ ಚಾಲಕರೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಿದರೆ ಟ್ರಾಫಿಕ್ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು. ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸುರಕ್ಷಿತ ಸಂಚಾರಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಕ್ರೆöÊಂ ವಿಭಾಗದ ಎಸ್‌ಐ ವೆಂಕಟೇಶ್ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.